ಗಣೇಶ ಚತುರ್ಥಿ–2026ರ ಅಂಗವಾಗಿ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಯುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 492 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ನಡೆಯಲಿದ್ದು, ಪೊಲೀಸ್ ಇಲಾಖೆ 415 ಸಾಮಾನ್ಯ, 74 ಸೂಕ್ಷ್ಮ ಹಾಗೂ 3 ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿದೆ.
ಸೆ.14ರಿಂದ 29ರವರೆಗೆ ವಿವಿಧ ದಿನಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಸೆ.14ರಂದು ಅತಿ ಹೆಚ್ಚು 211 ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಸೆ.15ರಂದು 108, ಸೆ.16ರಂದು 114 ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಸೆ.17ರಂದು 13, ಸೆ.18ರಂದು 29, ಸೆ.19ರಂದು 4, ಸೆ.20ರಂದು 5, ಸೆ.22ರಂದು 1, ಸೆ.23ರಂದು 1, ಸೆ.24ರಂದು 1, ಸೆ.25ರಂದು 2, ಸೆ.26ರಂದು 1 ಹಾಗೂ ಸೆ.29ರಂದು 2 ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಸೆ.21, 27 ಮತ್ತು 28ರಂದು ಯಾವುದೇ ವಿಸರ್ಜನಾ ಕಾರ್ಯಕ್ರಮ ನಿಗದಿಯಾಗಿಲ್ಲ.
ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ನಿಗದಿತ ಮಾರ್ಗಗಳು ಹಾಗೂ ಸ್ಥಳಗಳನ್ನು ಗುರುತಿಸಲಾಗಿದೆ. ಮೆರವಣಿಗೆ ಮತ್ತು ವಿಸರ್ಜನಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
22 ಶಾಂತಿ ಸಮಿತಿ ಸಭೆ
ಗಣೇಶೋತ್ಸವವನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ 22 ಶಾಂತಿ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಸಾರ್ವಜನಿಕರು, ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಪೊಲೀಸ್ ಇಲಾಖೆ ಸಮನ್ವಯ ಸಾಧಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಅಗತ್ಯ ಸೂಚನೆಗಳನ್ನು ನೀಡಿದೆ.
611 ಮಂದಿಯ ವಿರುದ್ಧ ಮುನ್ನೆಚ್ಚರಿಕಾ ಕ್ರಮ
ಗಣೇಶೋತ್ಸವದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. 2026ನೇ ಸಾಲಿನ ದಾಖಲೆಗಳ ಪ್ರಕಾರ 611 ಮಂದಿಯ ವಿರುದ್ಧ ಮುನ್ನೆಚ್ಚರಿಕಾ ಕ್ರಮ ಜರುಗಿಸಲಾಗಿದ್ದು, 487 ಮಂದಿಯನ್ನು ಬಾಂಡ್ ಓವರ್ ಮಾಡಲಾಗಿದೆ.
996 ಅಧಿಕಾರಿ–ಸಿಬ್ಬಂದಿ ನಿಯೋಜನೆ
ಗಣೇಶೋತ್ಸವದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 996 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಬಂದೋಬಸ್ತ್‌ನಲ್ಲಿ 3 ಎಎಸ್‌ಪಿ/ಡಿಎಸ್‌ಪಿ, 7 ಸಿಐ, 37 ಪಿಎಸ್‌ಐ, 83 ಎಎಸ್‌ಐ, 680 ಹೆಡ್ ಕಾನ್‌ಸ್ಟೆಬಲ್/ಪೊಲೀಸ್ ಕಾನ್‌ಸ್ಟೆಬಲ್/ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್, 20 ಡಿಎಆರ್ ಸಿಬ್ಬಂದಿ, 3 ಕೆಎಸ್‌ಆರ್‌ಪಿ ತುಕಡಿಗಳು ಹಾಗೂ 163 ಗೃಹರಕ್ಷಕ ಸಿಬ್ಬಂದಿ ನಿಯೋಜಿಸಲಾಗಿದೆ. ಇದರೊಂದಿಗೆ 12 ಪಿಎ ವ್ಯವಸ್ಥೆ ಹಾಗೂ 3 ಡ್ರೋನ್‌ಗಳ ಮೂಲಕವೂ ನಿಗಾ ವಹಿಸಲಾಗುತ್ತಿದೆ.
ನಿಯಮ ಪಾಲನೆಗೆ ಪೊಲೀಸ್ ಮನವಿ
ಗಣೇಶೋತ್ಸವ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಆಚರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರು ಮತ್ತು ಗಣೇಶೋತ್ಸವ ಸಮಿತಿಗಳಿಗೆ ಮನವಿ ಮಾಡಿದೆ.
ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನಿಗದಿಪಡಿಸಿದ ಸ್ಥಳ ಮತ್ತು ಮಾರ್ಗಗಳಲ್ಲಿಯೇ ನಡೆಸಬೇಕು. ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನೀಡುವ ಸೂಚನೆಗಳನ್ನು ಪಾಲಿಸಬೇಕು. ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗದಂತೆ ಸಹಕರಿಸಬೇಕು.
ಯಾವುದೇ ರೀತಿಯ ಪ್ರಚೋದನಕಾರಿ ಘೋಷಣೆ, ಅಹಿತಕರ ಘಟನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಜಿಲ್ಲೆಯ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮನವಿ ಮಾಡಿದ್ದಾರೆ.







