ಉಡುಪಿಯಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದ್ದು, ಅದರ ಸಂಬಂಧ ದಾಖಲಾದ ಎಫ್‌ಐಆರ್ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರತಿಭಟನೆಯ ವೇಳೆ ಶಾಸಕರು “ಬಾಬರಿ ಮಸೀದಿ ಧ್ವಂಸ ಮಾಡಿದ ರೀತಿಯಲ್ಲೇ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ” ಎಂದು ಹೇಳಿಕೆ ನೀಡಿದ್ದರೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಯ ಭಾಗವಾಗಿ ಬುಧವಾರ ಸಂಜೆ ತನಿಖಾಧಿಕಾರಿಗಳು ಶಾಸಕ ಯಶ್‌ಪಾಲ್ ಸುವರ್ಣ ಅವರ ನಿವಾಸಕ್ಕೆ ತೆರಳಿ ನೋಟಿಸ್ ಜಾರಿಗೊಳಿಸಿದ್ದು, ಶಾಸಕರು ಅದನ್ನು ಸ್ವೀಕರಿಸಿದ್ದಾರೆ.
ಇದಲ್ಲದೆ, “ರಾಹುಲ್ ಗಾಂಧಿ ಅಮಲು ಪದಾರ್ಥ ಸೇವಿಸುವುದರಿಂದ ನಶೆಯಲ್ಲೇ ಮುಳುಗಿರುತ್ತಾರೆ” ಎಂಬ ಹೇಳಿಕೆಯನ್ನೂ ಶಾಸಕರು ನೀಡಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗಳು ದ್ವೇಷ ಭಾಷಣದ ವ್ಯಾಪ್ತಿಗೆ ಬರುತ್ತವೆಯೇ ಎಂಬ ಅಂಶ ಸೇರಿದಂತೆ ಪ್ರಕರಣದ ಎಲ್ಲ ಆಯಾಮಗಳ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.







