ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಪ್ರಯುಕ್ತ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ನಡೆಯಲಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್, ಉಡುಪಿ ನಗರ ಪ್ರದೇಶದ ಅಧ್ಯಕ್ಷ ನಿಸಾರ್ ಅಹ್ಮದ್ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್(ಸ) ಅವರು ಜಗತ್ತಿಗೆ ನೀಡಿದ ಸಂದೇಶವು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯನ್ನು ಆಧರಿಸಿದೆ. ವ್ಯಕ್ತಿಯ ನೈತಿಕತೆ ಮತ್ತು ಚಾರಿತ್ರ್ಯವನ್ನು ಸುಧಾರಿಸುವ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಅವರು ಶ್ರಮಿಸಿದ್ದರು ಎಂದು ಹೇಳಿದರು.
ಪ್ರವಾದಿ ಮುಹಮ್ಮದ್(ಸ) ಅವರ ಸಂದೇಶವನ್ನು ಕನ್ನಡ ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಹಾಗೂ ಸಮಾಜದಲ್ಲಿ ಪರಸ್ಪರ ಬಾಂಧವ್ಯ ಮತ್ತು ಸೌಹಾರ್ದತೆಯನ್ನು ಬಲಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ಅಭಿಯಾನದ ಅವಧಿಯಲ್ಲಿ ವೈಯಕ್ತಿಕ ಭೇಟಿ, ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ವಿಷಯದ ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ ಮತ್ತು ಚರ್ಚಾಗೋಷ್ಠಿ, ಸೀರತ್ ಪ್ರವಚನ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು ಹಾಗೂ ಸೌಹಾರ್ದ ಸಂದೇಶ ರ‍್ಯಾಲಿಗಳನ್ನು ಆಯೋಜಿಸಲಾಗುವುದು ಎಂದರು.

ಉಡುಪಿ ನಗರ ಪ್ರದೇಶದಲ್ಲಿ ಸಾರ್ವಜನಿಕ ಸಭೆ, ವೈದ್ಯಕೀಯ ತಪಾಸಣಾ ಶಿಬಿರ, ಚಹಾಕೂಟ, ಪುಸ್ತಕ ಬಿಡುಗಡೆ, ಆಸ್ಪತ್ರೆ ಭೇಟಿ ಹಾಗೂ ರೋಗಿಗಳ ಸಂದರ್ಶನ, ಹಣ್ಣು-ಹಂಪಲು ವಿತರಣೆ, ವೃದ್ಧಾಶ್ರಮ ಮತ್ತು ಅನಾಥಾಲಯ ಭೇಟಿ, ಮಾನವ ಸರಪಳಿ ಹಾಗೂ ರೀಲ್ಸ್ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಿಸಾರ್ ಅಹ್ಮದ್ ಮಾಹಿತಿ ನೀಡಿದರು.

ಪ್ರವಾದಿ ಮುಹಮ್ಮದ್(ಸ) ಅವರ ಜೀವನ, ಸಂದೇಶ ಮತ್ತು ಸಮಾಜ ಪರಿವರ್ತನೆಯ ಆಶಯಗಳನ್ನು ಜನರಿಗೆ ಪರಿಚಯಿಸುವುದರ ಜೊತೆಗೆ ಸೌಹಾರ್ದತೆ, ಮಾನವೀಯತೆ ಮತ್ತು ಸಾಮಾಜಿಕ ಬಾಂಧವ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಅಭಿಯಾನದ ಅಂಗವಾಗಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ಬರೆದ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಕೃತಿಗಳನ್ನು ಬಿಡುಗಡೆಗೊಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಭಿಯಾನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ. ಶಾನವಾಝ್, ಕಾರ್ಯದರ್ಶಿ ಜ. ಖಾಲಿದ್ ಅಬ್ದುಲ್ ಆಝೀಝ್, ಉಪಾಧ್ಯಕ್ಷರಾದ ಜ. ರಿಯಾಝ್ ಅಹಮದ್, ಸಹ ಕಾರ್ಯದರ್ಶಿ ಜ. ಫಾರೂಕ್ ಇಂದ್ರಾಳಿ, ಸಾಮಾಜಿಕ ಹೋರಾಟಗಾರ ಜ. ಇದ್ರೀಸ್ ಹೂಡೆ ಹಾಗೂ ಜ. ಫೈಜ್ ಅಹಮದ್ ಉಪಸ್ಥಿತರಿದ್ದರು.





