ಕರಾವಳಿ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠ ಸ್ಥಾಪನೆ ವಿಚಾರವನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಸೇರಿಸಿ, ಈ ಕುರಿತು ರಾಜ್ಯ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಪ್ರಯತ್ನಿಸಬೇಕು ಎಂದು ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಉಡುಪಿ ಜಿಲ್ಲಾ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ ಮನವಿ ಮಾಡಿದ್ದಾರೆ.
ಈ ಸಂಬಂಧ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ಮಾಜಿ ಸಂಸದರು ಹಾಗೂ ಸಚಿವರಾದ ಜಯಪ್ರಕಾಶ್ ಹೆಗ್ಡೆ ಅವರನ್ನು ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕರಾವಳಿ ಭಾಗದ ಜನರಿಗೆ ಹೈಕೋರ್ಟ್‌ಗೆ ಸಂಬಂಧಿಸಿದ ನ್ಯಾಯಾಂಗ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಲು ಅನುಕೂಲವಾಗುವಂತೆ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಇದೀಗ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಮಟ್ಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಹಾಗೂ ಸಚಿವ ಸಂಪುಟ ಸಭೆಯಲ್ಲಿ ವಿಚಾರ ಚರ್ಚೆಗೆ ಬರುವಂತೆ ಮಾಡಲು ಜನಪ್ರತಿನಿಧಿಗಳು ಅಗತ್ಯ ಪ್ರಯತ್ನ ನಡೆಸಬೇಕು ಎಂದು ಪ್ರೇಮ್ ಪ್ರಸಾದ್ ಶೆಟ್ಟಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿಯ ವಿಜಯ್ ಡಿಸೋಜ, ಮಾಧವ, ಸುರೇಶ್ ಕಾಮತ್, ಕು. ಸರಿತಾ, ಶ್ರೀಮತಿ ಪೌರ್ಣಮಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.







