ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ವಿಶಾಲ್ ಕಂಪನಿಯ ಬಸ್ ನಡುವೆ ಭಾನುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ.
ಮಧ್ಯಾಹ್ನ ಸುಮಾರು 3.30ರ ವೇಳೆಗೆ ಘಟನೆ ನಡೆದಿದ್ದು, ರಮಾನಾಥ ರೈ ಅವರು ತಮ್ಮ ಆಪ್ತ ಸಹಾಯಕ ಡೆನ್ಜೆಲ್ ಅವರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಡೆನ್ಜೆಲ್ ಅವರ ಬಲಗಾಲಿಗೆ ಮುರಿತವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನೆಪೊಯಾ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.
ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಇತರರಿಗೆ ಯಾವುದೇ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.






