ಕಾರ್ಕಳ ತಾಲೂಕಿನ ರೇಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ಯಾರಲ್ ಬೆಟ್ಟು, ಹೆಡ್ಮೆ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಸುಮಾರು 15 ದಲಿತ ಕುಟುಂಬಗಳ ಮನೆಗಳು ಅಪಾಯದ ಅಂಚಿನಲ್ಲಿವೆ. ಈ ಹಿನ್ನೆಲೆಯಲ್ಲಿ ಅಪಾಯದಲ್ಲಿರುವ ಕುಟುಂಬಗಳಿಗೆ ತುರ್ತು ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಗುಡ್ಡ ಕುಸಿತದಿಂದ ಮನೆಗಳಿಗೆ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಪಾಯದ ಅಂಚಿನಲ್ಲಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಸೂಕ್ತ ಪುನರ್ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹಾಗೂ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಉಪಸ್ಥಿತರಿದ್ದರು.






