ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ ಸಲಹೆಗಳನ್ನು ಆಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 18ರಂದು ಹೆಬ್ರಿಯಲ್ಲಿ ಸಭೆ ನಡೆಸಲಿದ್ದಾರೆ.
ಸೆ.18ರಂದು ಅಪರಾಹ್ನ 3 ಗಂಟೆಗೆ ಹೆಬ್ರಿ ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಸಭೆ ನಡೆಯಲಿದ್ದು, ಕಸ್ತೂರಿರಂಗನ್ ವರದಿಗೆ ಒಳಪಡುವ ಜಿಲ್ಲೆಯ 35 ಗ್ರಾಮಗಳ ಗ್ರಾಮಸ್ಥರೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ.
ಕುಂದಾಪುರ, ಕಾರ್ಕಳ, ಹೆಬ್ರಿ ಹಾಗೂ ಬೈಂದೂರು ತಾಲೂಕುಗಳ ವ್ಯಾಪ್ತಿಯ ಕಸ್ತೂರಿರಂಗನ್ ವರದಿಗೆ ಒಳಪಡುವ 35 ಗ್ರಾಮಗಳ ನಿವಾಸಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ವರದಿಯಿಂದ ಉಂಟಾಗಬಹುದಾದ ಸಾಧಕ-ಬಾಧಕಗಳು, ಸ್ಥಳೀಯ ಜನಜೀವನ, ಕೃಷಿ ಹಾಗೂ ಅಭಿವೃದ್ಧಿ ಚಟುವಟಿಕೆಗಳ ಮೇಲೆ ಬೀರುವ ಪರಿಣಾಮಗಳ ಕುರಿತು ಗ್ರಾಮಸ್ಥರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಮುಖ್ಯಮಂತ್ರಿಗಳ ಮುಂದೆ ಮಂಡಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.






