ರಿಷಬ್ ಶೆಟ್ಟಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹಾಗೂ ವಿ-ಶೈನ್ ಕೋಚಿಂಗ್ ಸೆಂಟರ್ ಸಹಭಾಗಿತ್ವದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಕೋಟದ ಡಾ. ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಿತು.
ಸಮಾರಂಭದಲ್ಲಿ ಆದರ್ಶ ಆಸ್ಪತ್ರೆ ಉಡುಪಿಯ ಮುಖ್ಯಸ್ಥ ಡಾ. ಜಿ.ಎಸ್. ಚಂದ್ರಶೇಖರ್, ಲೆಕ್ಕ ಪರಿಶೋಧಕ ರಾಘವೇಂದ್ರ, ಸುಶೀಲ ಹಾಗೂ ಶ್ರೀಕೃಷ್ಣ ಪ್ರಸಾದ್ ಫೌಂಡೇಶನ್‌ನ ಪ್ರವರ್ತಕ ಸಂಪತ್ ಶೆಟ್ಟಿ ಉಪಸ್ಥಿತರಿದ್ದು, ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಡಾ. ಜಿ.ಎಸ್. ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.

ಶ್ರೀಕೃಷ್ಣ ಪ್ರಸಾದ್ ಫೌಂಡೇಶನ್‌ನ ಪ್ರವರ್ತಕ ಸಂಪತ್ ಶೆಟ್ಟಿ ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ತರಬೇತಿ ಒದಗಿಸುವ ಉದ್ದೇಶದಿಂದ ಈ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ. ವಿ-ಶೈನ್ ಕೋಚಿಂಗ್ ಸೆಂಟರ್‌ನ ಹರೀಶ್ ಶೆಟ್ಟಿ, ಗಿರೀಶ್ ಶೆಟ್ಟಿ ಹಾಗೂ ವಿವೇಕ್ ಅಮೀನ್ ಅವರು ಈ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ಆಶಯದೊಂದಿಗೆ ಉಚಿತ ತರಬೇತಿ ಕಾರ್ಯಾಗಾರದ ಪರಿಕಲ್ಪನೆಯನ್ನು ಮುಂದಿಟ್ಟಿದ್ದರು. ಅಂದಿನಿಂದ ಶ್ರೀಕೃಷ್ಣ ಪ್ರಸಾದ್ ಫೌಂಡೇಶನ್ ಅವರೊಂದಿಗೆ ಕೈಜೋಡಿಸಿ ಈ ಕಾರ್ಯಕ್ಕೆ ಸಹಕಾರ ನೀಡುತ್ತಿದೆ. ಯಾವುದೇ ಫಲಾಪೇಕ್ಷೆಯಿಲ್ಲದೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ವಿ-ಶೈನ್ ಕೋಚಿಂಗ್ ಸೆಂಟರ್‌ನ ಕಾರ್ಯ ಶ್ಲಾಘನೀಯ ಎಂದರು.

ವಿ-ಶೈನ್ ಕೋಚಿಂಗ್ ಸೆಂಟರ್ ನಿರ್ದೇಶಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ ಸುಮಾರು 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿ ಭಾನುವಾರ ಸುಮಾರು 100 ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲಾಗಿದೆ. ಅಭ್ಯರ್ಥಿಗಳಿಗೆ ಪರೀಕ್ಷೆ ಎದುರಿಸಲು ಅಗತ್ಯವಾದ ಮಾರ್ಗದರ್ಶನ ಹಾಗೂ ತರಬೇತಿ ಒದಗಿಸುವುದು ಇದರ ಉದ್ದೇಶವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಡಿಸೆಂಬರ್ 6ರಂದು ರಿಷಬ್ ಶೆಟ್ಟಿ ಫೌಂಡೇಶನ್ ವತಿಯಿಂದ ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಉಚಿತ ಕಾರ್ಯಾಗಾರವನ್ನು ಇದೇ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಆಯೋಜಿಸಲಾಗುವುದು. ರಾಜ್ಯ ಸರ್ಕಾರ ಸುಮಾರು 6 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು.

2012ರಿಂದ 2026ರವರೆಗೆ ವಿ-ಶೈನ್ ಕೋಚಿಂಗ್ ಸೆಂಟರ್ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಾ ಬಂದಿದೆ. ಸಂಸ್ಥೆಯ ಮೂಲಕ ತರಬೇತಿ ಪಡೆದ ಸುಮಾರು 500 ವಿದ್ಯಾರ್ಥಿಗಳು ಈಗಾಗಲೇ ವಿವಿಧ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಗುಣಮಟ್ಟದ ತರಬೇತಿ ದೊರೆಯಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬುದು ಸಂಸ್ಥೆಯ ಆಶಯವಾಗಿದೆ ಎಂದು ಹೇಳಿದರು.

ವಿ-ಶೈನ್ ಕೋಚಿಂಗ್ ಸೆಂಟರ್ ನಿರ್ದೇಶಕ ಹರೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರೀಶ್ ಶೆಟ್ಟಿ ಸ್ವಾಗತಿಸಿದರು. ವಿವೇಕ್ ಅಮೀನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.






