ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕಾರ್ಮಿಕ ವಿಭಾಗದ ಉಸ್ತುವಾರಿಯಾಗಿ ತೀರ್ಥಹಳ್ಳಿಯ ಯುವ ನಾಯಕ, ಈಡಿಗ–ಬಿಲ್ಲವ ಸಮಾಜದ ಮುಖಂಡ ಕುರುವಳ್ಳಿ ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆಯ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಶಾಂತವೀರ ನಾಯ್ಕ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕುರುವಳ್ಳಿ ನಾಗರಾಜ್ ಅವರು ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಯುವ ಸಂಘಟನೆಯ ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪಕ್ಷ ಸಂಘಟನೆಗೆ ಅವರು ಸಲ್ಲಿಸಿರುವ ಸೇವೆ, ಸಂಘಟನಾ ಸಾಮರ್ಥ್ಯ, ಶ್ರಮ ಮತ್ತು ಬದ್ಧತೆಯನ್ನು ಪರಿಗಣಿಸಿ ರಾಜ್ಯ ನಾಯಕತ್ವ ಈ ಮಹತ್ವದ ಜವಾಬ್ದಾರಿ ನೀಡಿದೆ. ನೂತನ ಜವಾಬ್ದಾರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಮಿಕ ವಿಭಾಗವನ್ನು ಬಲಪಡಿಸುವುದು, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅಸಂಘಟಿತ ಕಾರ್ಮಿಕರು ಸೇರಿದಂತೆ ಶ್ರಮಿಕ ವರ್ಗದ ಹಕ್ಕುಗಳ ಪರವಾಗಿ ಧ್ವನಿಯಾಗುವ ಗುರಿ ಹೊಂದಿದ್ದಾರೆ.
ಅಲ್ಲದೆ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಬಲಪಡಿಸುವುದರೊಂದಿಗೆ ಈಡಿಗ–ಬಿಲ್ಲವ ಸಮಾಜದ ಸಂಘಟನೆ ಮತ್ತು ಏಳಿಗೆ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುವುದಾಗಿ ಕುರುವಳ್ಳಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೀರ್ಥಹಳ್ಳಿಯ ಯುವ ನಾಯಕನಿಗೆ ರಾಜ್ಯಮಟ್ಟದ ಮಹತ್ವದ ಜವಾಬ್ದಾರಿ ದೊರೆತಿರುವುದು ಈಡಿಗ–ಬಿಲ್ಲವ ಸಮಾಜದ ಮುಖಂಡರು, ಹಿಂದುಳಿದ ವರ್ಗಗಳ ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಸಂತಸ ಮತ್ತು ಹೆಮ್ಮೆಗೆ ಕಾರಣವಾಗಿದೆ.






