ಉಡುಪಿ ತಾಲ್ಲೂಕಿನ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಗಂಡು ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ಕೆಲವೇ ಸಮಯದ ಹಿಂದೆ ಜನಿಸಿದಂತೆ ಕಂಡುಬಂದ ಗಂಡು ಮಗು ಪತ್ತೆಯಾಗಿದೆ. ಸ್ಥಳೀಯರು ಮಗುವನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದಾಗ ಹೃದಯ ಬಡಿತ ಇರುವುದು ದೃಢಪಟ್ಟಿದೆ. ಬಳಿಕ ಹೆಚ್ಚಿನ ಚಿಕಿತ್ಸೆ ಹಾಗೂ ಆರೈಕೆಗಾಗಿ ಮಗುವನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ತಿಳಿದ ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟುಹೋದವರು ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಮಗುವನ್ನು ಯಾರು ಹಾಗೂ ಯಾವ ಕಾರಣಕ್ಕಾಗಿ ಬಿಟ್ಟು ಹೋಗಿದ್ದಾರೆ ಎಂಬುದರ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.






