ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ (ಯುಜಿಡಿ) ಕಾಮಗಾರಿ 11 ವರ್ಷ ಕಳೆದರೂ ಪೂರ್ಣಗೊಳ್ಳದಿರುವುದಕ್ಕೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನ ದುರುಪಯೋಗವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಅವರು ಸೂಚಿಸಿದರು.
ಮಂಗಳವಾರ ಕುಂದಾಪುರ ಪುರಸಭೆಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನುದಾನದ ಕೊರತೆ, ಭೂಸ್ವಾಧೀನ ಸೇರಿದಂತೆ ವಿವಿಧ ಕಾರಣಗಳಿಂದ ಕಾಮಗಾರಿ ಅಪೂರ್ಣಗೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗುತ್ತಿದೆ. ಸಹಾಯಕ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿ ವಿಳಂಬಕ್ಕೆ ಕಾರಣರಾದವರ ವಿವರ, ಎದುರಾಗಿರುವ ಅಡಚಣೆಗಳು ಹಾಗೂ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಅನುದಾನದ ಕುರಿತು ಸಮಗ್ರ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಯೋಜನೆಯ ವಿಳಂಬಕ್ಕೆ ಸಂಬಂಧಿಸಿದ ವರದಿಗಳ ಕುರಿತು ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿ, ಸರಕಾರದ ಮಟ್ಟದಲ್ಲಿ ಕೂಲಂಕಷವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ
ನಗರ ಪ್ರದೇಶದಲ್ಲಿ ಪೌರಕಾರ್ಮಿಕರಿಗೆ ಖಾಯಂ ವಸತಿಗೃಹ ನಿರ್ಮಿಸಲು ಎರಡು ಎಕರೆ ಜಾಗ ಗುರುತಿಸಿ ಒದಗಿಸಬೇಕು. ಪೌರಕಾರ್ಮಿಕರು ನಗರದಲ್ಲೇ ವಾಸಿಸುವ ವ್ಯವಸ್ಥೆ ಕಲ್ಪಿಸಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜತೆಗೆ ನಗರದ ಸ್ವಚ್ಛತೆಗೆ ಸ್ಥಳೀಯಾಡಳಿತಗಳು ಮೊದಲ ಆದ್ಯತೆ ನೀಡಬೇಕು ಎಂದು ಸಚಿವರು ಹೇಳಿದರು.
ತೆರಿಗೆ ಹಾಗೂ ನಳ್ಳಿ ನೀರಿನ ಶುಲ್ಕ ವಸೂಲಿಯಲ್ಲಿ ನಿಗದಿತ ಗುರಿ ಸಾಧಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬೀದಿದೀಪಗಳ ಅಳವಡಿಕೆ ಮತ್ತು ನಿರ್ವಹಣೆ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳಿಗೆ ಸಮಯ ಪಾಲನೆ ಸೂಚನೆ
ಪುರಸಭೆಗಳ ಮುಖ್ಯಾಧಿಕಾರಿಗಳು ಬೆಳಗ್ಗೆ 6 ಗಂಟೆಗೆ ಕಚೇರಿಯಲ್ಲಿ ಹಾಜರಾಗಿ ಹಾಜರಾತಿ ದಾಖಲಿಸಬೇಕು. ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಕಚೇರಿಯಲ್ಲಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು ಎಂದು ನಿರ್ದೇಶನ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ತಿಂಗಳಿಗೊಮ್ಮೆ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಕಾಮಗಾರಿಗಳು, ಆಡಳಿತಾತ್ಮಕ ಕಾರ್ಯಗಳು ಹಾಗೂ ಸಮಸ್ಯೆಗಳನ್ನು ಪರಿಶೀಲಿಸಬೇಕು. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅಹವಾಲುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಆದ್ಯತೆ ನೀಡಬೇಕು ಎಂದರು.
ಸಭೆಯಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ. ಮತ್ತಿತರರು ಉಪಸ್ಥಿತರಿದ್ದರು.





