ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಇಲ್ಲಿನ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಚಿವ ಬಸವಂತಪ್ಪ ಹೇಳಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ವಿಶೇಷವಾಗಿ ಪ್ರವಾಸೋದ್ಯಮ ಸೇರಿದಂತೆ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಶ್ವಾಸ ಪಡೆದುಕೊಂಡು, ಅವರಿಂದ ಅಗತ್ಯ ಮಾಹಿತಿ ಸಂಗ್ರಹಿಸಲಾಗುವುದು ಎಂದರು.
ಕರಾವಳಿ ಭಾಗದಲ್ಲಿ ಯಾವ ಕ್ಷೇತ್ರಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಕೈಗೊಳ್ಳಬೇಕು ಎಂಬುದರ ಕುರಿತು ಮಾಹಿತಿ ಆಧರಿಸಿ ಚಿಂತನೆ ನಡೆಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಚರ್ಚೆಗಳು ವಿಷಯಗಳ ಸ್ವರೂಪ ಮತ್ತು ಅವುಗಳ ಅಗತ್ಯತೆಯನ್ನು ಆಧರಿಸಿರುತ್ತವೆ. ಸಭೆ ಕೇವಲ ಎರಡು ಗಂಟೆಗಳಿಗೆ ಸೀಮಿತವಾಗಿರುವುದಿಲ್ಲ. ಅಗತ್ಯವಿದ್ದರೆ ಬೆಳಗ್ಗೆಯಿಂದ ಸಂಜೆಯವರೆಗೂ ಸಭೆ ನಡೆಸಬಹುದಾಗಿದೆ ಎಂದು ಸಚಿವರು ತಿಳಿಸಿದರು.
ವಿರೋಧ ಪಕ್ಷದ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದ ಟೀಕೆಗಳಿಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಮೀನುಗಾರಿಕೆ ಕ್ಷೇತ್ರದ ಸಮಸ್ಯೆಗಳಿಗೆ ಜಿಲ್ಲಾ ಮಟ್ಟದಲ್ಲಿ ಸಭೆ
ಮೀನುಗಾರಿಕೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಬಸವಂತಪ್ಪ, ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ ಭೇಟಿ ನೀಡಿರುವುದಾಗಿ ಹೇಳಿದರು.
ಮೀನುಗಾರರು, ಮೀನು ಕಾರ್ಮಿಕರು ಹಾಗೂ ನಾಡದೋಣಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕಡಲ್ಕೊರೆತ ತಡೆಗೆ ಹೊಸ ತಂತ್ರಜ್ಞಾನ ಬಳಕೆಗೆ ಚಿಂತನೆ
ಕರಾವಳಿ ಪ್ರದೇಶಗಳಲ್ಲಿ ತೀವ್ರವಾಗಿರುವ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಮಾತನಾಡಿದ ಸಚಿವರು, ಕರಾವಳಿಯಲ್ಲಿ ಬ್ರೇಕ್‌ವಾಟರ್‌ಗಳ ನಿರ್ಮಾಣಕ್ಕೆ ಸಾಕಷ್ಟು ಬೇಡಿಕೆ ಇದೆ. ಈ ಕುರಿತು ಜನರ ಸಮಸ್ಯೆಗಳನ್ನು ಆಲಿಸಲಾಗಿದೆ ಎಂದರು.
ಕಡಲ್ಕೊರೆತ ತಡೆಗೆ ಹೊಸ ತಂತ್ರಜ್ಞಾನಗಳು ಲಭ್ಯವಿದ್ದು, ಕೇರಳ ಮಾದರಿಯಲ್ಲಿ ತಡೆಗೋಡೆ ನಿರ್ಮಿಸುವ ಸಾಧ್ಯತೆಗಳ ಬಗ್ಗೆಯೂ ಗಮನ ಹರಿಸಲಾಗುವುದು. ಸ್ಥಳೀಯ ಪರಿಸ್ಥಿತಿಗೆ ಸೂಕ್ತವಾದ ತಂತ್ರಜ್ಞಾನವನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸೀ ಆ್ಯಂಬುಲೆನ್ಸ್ ಬೇಡಿಕೆ ಪರಿಶೀಲನೆ
ಕರಾವಳಿ ಮೀನುಗಾರರ ಬಹುಕಾಲದ ಬೇಡಿಕೆಯಾಗಿರುವ ಸೀ ಆ್ಯಂಬುಲೆನ್ಸ್ ವ್ಯವಸ್ಥೆ ಕುರಿತೂ ಗಮನ ಹರಿಸಲಾಗುವುದು. ಈ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಸವಂತಪ್ಪ ಹೇಳಿದರು.






