ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಉದ್ದೇಶದಿಂದ ಮುದರಂಗಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ, ಪಂಚ ಗ್ಯಾರಂಟಿ ಸಂಭ್ರಮೋತ್ಸವ ಹಾಗೂ ನೂತನ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭವು ಮುದರಂಗಡಿಯ ಸೈಂಟ್ ಕ್ಲೀವಿಯರ್ ಚರ್ಚ್ ಆಡಿಟೋರಿಯಂನಲ್ಲಿ ನಡೆಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೈಕಲ್ ರಮೇಶ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದರು. ಐವನ್ ಡಿಸೋಜಾ ಹಾಗೂ ವಿನಯ್ ಕುಮಾರ್ ಸೊರಕೆ ಅವರು ಕಾಂಗ್ರೆಸ್ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕೃತವಾಗಿ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡಿರುವುದನ್ನು ಘೋಷಿಸಿದರು.

22 ಕೋಟಿ ರೂ. ಅನುದಾನ, ಗ್ರಾಮದ ಅಭಿವೃದ್ಧಿಗೆ ಆದ್ಯತೆ
ನೂತನ ಅಧ್ಯಕ್ಷ ಮೈಕಲ್ ರಮೇಶ್ ಡಿಸೋಜಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮಟ್ಟದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಮುದರಂಗಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ತಮ್ಮ ಪ್ರಮುಖ ಗುರಿಯಾಗಿದೆ. ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವುದು ಸೇರಿದಂತೆ ಜನರ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡಲಾಗಿದೆ. ಒಮ್ಮೆ ಬದ್ಧತೆ ತೊಟ್ಟರೆ ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಮುದರಂಗಡಿ ಪ್ರದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರದಿಂದ ಸುಮಾರು 22 ಕೋಟಿ ರೂ. ಅನುದಾನ ತರಲಾಗಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕಾರ್ಯನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಸರ್ಕಾರದ ಬದ್ಧತೆಯ ಪ್ರತೀಕ
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಜನರಿಗೆ ನೀಡಿದ ಮಾತಿನಂತೆ ನಡೆದುಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ದೇವಕರ್ ಶೆಟ್ಟಿ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಸಮಾವೇಶದ ಅಂಗವಾಗಿ ಆಧಾರ್ ಇ-ಕೆವೈಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡೇವಿಡ್ ಡಿಸೋಜಾ ಅವರ ಸಮಾಜಮುಖಿ ಸೇವೆ ಸ್ಮರಿಸಿದ ಸೊರಕೆ
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಡೇವಿಡ್ ಡಿಸೋಜಾ ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕರಾಗಿರದೆ, ಬಡವರು ಹಾಗೂ ಸಂಕಷ್ಟದಲ್ಲಿರುವ ಅನೇಕ ಜನರಿಗೆ ನೆರವಾದ ಸಮಾಜಮುಖಿ ವ್ಯಕ್ತಿಯಾಗಿದ್ದರು. ಮುದರಂಗಡಿ ಪ್ರದೇಶದ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಇದೀಗ ಅವರ ಸ್ಥಾನವನ್ನು ಮೈಕಲ್ ರಮೇಶ್ ಡಿಸೋಜಾ ವಹಿಸಿಕೊಂಡಿದ್ದು, ಅವರೂ ಅದೇ ರೀತಿಯಲ್ಲಿ ಜನಸೇವೆಗೆ ಆದ್ಯತೆ ನೀಡಿ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ತಲಾ 6 ಸಾವಿರ ರೂ.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇಂದು ಸಂಭ್ರಮದ ದಿನವಾಗಿದೆ. ಸರ್ಕಾರ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಉಳಿದಿದ್ದ ಮೂರು ತಿಂಗಳ ಹಣವನ್ನು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದ್ದು, ಫಲಾನುಭವಿಗಳ ಖಾತೆಗೆ ತಲಾ 6,000 ರೂ. ಜಮೆಯಾಗಲಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಸೇರಿದಂತೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಮೂಲಕ ಈವರೆಗೆ ರಾಜ್ಯಾದ್ಯಂತ ಒಟ್ಟು 1.54 ಲಕ್ಷ ಕೋಟಿ ರೂ. ಅನುದಾನವನ್ನು ಫಲಾನುಭವಿಗಳಿಗೆ ತಲುಪಿಸಲಾಗಿದೆ. ಈ ಮೂಲಕ ಸರ್ಕಾರ ತನ್ನ ಭರವಸೆಯನ್ನು ಉಳಿಸಿಕೊಂಡಿದೆ ಎಂದು ಹೇಳಿದರು.
ಉದ್ಯೋಗವಿಲ್ಲದ ಪದವೀಧರರಿಗೆ ಯುವನಿಧಿ ಯೋಜನೆಯಡಿ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು.

ಪಕ್ಷ ಸಂಘಟನೆ ಬಲಪಡಿಸುವ ಜವಾಬ್ದಾರಿ ನೂತನ ಅಧ್ಯಕ್ಷರಿಗೆ
ಮೈಕಲ್ ರಮೇಶ್ ಡಿಸೋಜಾ ಅವರಿಗೆ ನೂತನ ಅಧ್ಯಕ್ಷರಾಗಿ ಶುಭ ಹಾರೈಸಿದ ನಾಯಕರು, ಮುಂದಿನ ದಿನಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವಂತೆ ಕರೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಜಶೇಖರ್ ಕೋಟ್ಯಾನ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷೆ ಗೀತಾ ವಾಗ್ಳೆ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಫಲಿಮಾರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ದಿವಾಕರ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ, ಕಾಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಾಧ್ಯಕ್ಷ ರಿಯಾಜ್ ಮುದರಂಗಡಿ, ಅಧ್ಯಕ್ಷ ಹಾಸನಬ್ಬ ಶೇಕ್, ದಿವಂಗತ ಡೇವಿಡ್ ಡಿಸೋಜಾ ಅವರ ಪುತ್ರ ಹಾಗೂ ಉದ್ಯಮಿ ಡಾಯ್ಸನ್ ಡಿಸೋಜಾ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಯು.ಸಿ. ಶೇಕ್ ಹಬ್ಬ, ರಾಷ್ಟ್ರೀಯ ಮಹಿಳಾ ಕಾರ್ಯದರ್ಶಿ ಜೆ.ಬಾ. ಸೆಲ್ವನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿಲ್ಸನ್ ರೋಡ್ರಿಗಸ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ, ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿಸೋಜಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿಗೆ ಸನ್ಮಾನ
ಕಾರ್ಯಕ್ರಮದ ಅಂಗವಾಗಿ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಶಿಕ್ಷಕರು, ಕಾರ್ಯಕರ್ತರು ಹಾಗೂ ಮೆಸ್ಕಾಂ ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಪ್ರಮುಖರಾದ ಸುನಿಲ್ ಡಿಸೋಜಾ, ವಿನೋದ್, ಅರುಣ್ ಹಾಗೂ ಸೋಮನಾಥ್ ಉಪಸ್ಥಿತರಿದ್ದರು. ಸುಮಾರು 600ಕ್ಕೂ ಅಧಿಕ ಸಾರ್ವಜನಿಕರು ಹಾಗೂ ಗೃಹಲಕ್ಷ್ಮಿ ಫಲಾನುಭವಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸ್ಟೀವನ್ ಕುಲಾಸೋ ಕಾರ್ಯಕ್ರಮ ನಿರೂಪಿಸಿದರು.








