ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಅವರ ಕುಟುಂಬದ ಕುರಿತು ನೀಡಿರುವ ಸಾರ್ವಜನಿಕ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ಉಪಾಧ್ಯಕ್ಷ ಸತೀಶ್ ಕಾರ್ಕಳ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಗಾಂಧಿ ಕುಟುಂಬವು ದೇಶದ ಸ್ವಾತಂತ್ರ್ಯ ಹೋರಾಟ ಸೇರಿದಂತೆ ರಾಷ್ಟ್ರದ ರಾಜಕೀಯ ಮತ್ತು ಸಾರ್ವಜನಿಕ ಬದುಕಿಗೆ ಮಹತ್ವದ ಕೊಡುಗೆ ನೀಡಿದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆಗೀಡಾಗಿರುವ ಐತಿಹಾಸಿಕ ಹಿನ್ನೆಲೆಯಿರುವ ಸಂದರ್ಭದಲ್ಲಿ, ಜನಪ್ರತಿನಿಧಿಗಳು ಬಳಸುವ ಮಾತುಗಳು ಅತ್ಯಂತ ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ಅವರು ಮಾಡಿರುವ ಹೇಳಿಕೆ ಸಾರ್ವಜನಿಕರಲ್ಲಿ ಆತಂಕ ಮತ್ತು ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆಯಲ್ಲಿ ಕಾನೂನುಬಾಹಿರ ಬೆದರಿಕೆ ಅಥವಾ ಇತರ ಅಪರಾಧ ಸಂಬಂಧಿತ ಅಂಶಗಳಿವೆಯೇ ಎಂಬುದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಎಸ್‌ಐಟಿ ರಚಿಸಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಬೇಕು. ಸತ್ಯಾಂಶಗಳನ್ನು ಬಹಿರಂಗಪಡಿಸಿ, ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಕಾರ್ಕಳ ಒತ್ತಾಯಿಸಿದ್ದಾರೆ.






