ಉಡುಪಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯು ಶನಿವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲೆಯ 53 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಸಮುದಾಯದ ಪ್ರತಿನಿಧಿಗಳು ಭಾಗವಹಿಸಿ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಕಾನೂನುಬದ್ಧವಾಗಿ ದೊರೆಯಬೇಕಾದ ಪರಿಹಾರ ಸಮರ್ಪಕವಾಗಿ ಸಿಗುತ್ತಿಲ್ಲ ಎಂಬ ಅಹವಾಲು ಕೇಳಿಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸಮುದಾಯದ ಸಮಸ್ಯೆಗಳಿಗೆ ಪೊಲೀಸ್ ಇಲಾಖೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಇದೇ ರೀತಿಯ ಸ್ಪಂದನೆಯನ್ನು ಇತರ ಇಲಾಖೆಗಳೂ ನೀಡುವಂತೆ ಮುಖಂಡರು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಲಿರುವ ವಿಜಿಲೆನ್ಸ್ ಸಮಿತಿಯ ಸದಸ್ಯರನ್ನು ಬದಲಾಯಿಸುವಂತೆ ಕೂಡ ಮನವಿ ಸಲ್ಲಿಸಲಾಯಿತು.

ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತರ ಅಭಿವೃದ್ಧಿಗಾಗಿ ಸರ್ಕಾರ ನೀಡಿದ ಅನುದಾನ ದುರ್ಬಳಕೆಯಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ.
ತಮಿಳುನಾಡು ಮೂಲದ ಕೆಲವರು ಉಡುಪಿಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಕುರಿತು ನೀಡಲಾದ ದೂರಿನಂತೆ ಡಿಸಿಆರ್ಇ ಪೊಲೀಸ್ ಠಾಣೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ದಲಿತರಿಗೆ ನೆರವಾಗಲು ಡಿಸಿಆರ್ಇ ಠಾಣೆಗಳನ್ನು ಸ್ಥಾಪಿಸಲಾಗಿದ್ದರೂ ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆಯಿಂದ ನ್ಯಾಯ ದೊರೆಯಲು ವಿಳಂಬವಾಗುತ್ತಿದೆ ಎಂದು ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಸಭೆ ಒತ್ತಾಯಿಸಿತು.
ಇದೇ ವೇಳೆ ಎಸ್ಸಿ/ಎಸ್ಟಿ ಪ್ರಕರಣಗಳಲ್ಲಿ ಆರೋಪಿತರು ನ್ಯಾಯಾಲಯದಿಂದ ತಡೆ ಆದೇಶ ಪಡೆದುಕೊಂಡ ನಂತರ ಅದನ್ನು ತೆರವುಗೊಳಿಸಲು ಡಿಸಿಆರ್ಇ ಠಾಣೆ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಅಹವಾಲು ಕೇಳಿಬಂದಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.






