ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರನ್ನು ತಕ್ಷಣ ಅಮಾನತುಗೊಳಿಸಿ, ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಆಸ್ಪತ್ರೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಕ್ತ ವ್ಯಾಪಾರ ಪ್ರಕರಣ ಸೇರಿದಂತೆ ವಿವಿಧ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕಾದರೆ ಸಂಬಂಧಪಟ್ಟ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ತನಿಖೆ ನಡೆಸುವುದು ಅಗತ್ಯ ಎಂದು ತಿಳಿಸಿದ್ದಾರೆ.
ಡಾ. ಅಶೋಕ್ ಅವರ ನೇಮಕಾತಿ, ಸೇವಾ ಅರ್ಹತೆ, ಆಡಳಿತಾತ್ಮಕ ನಡೆ ಹಾಗೂ ಸಿಬ್ಬಂದಿಯೊಂದಿಗೆ ವರ್ತನೆಗೆ ಸಂಬಂಧಿಸಿದಂತೆ ಹಲವು ಆರೋಪಗಳನ್ನು ಪ್ರಕಟಣೆಯಲ್ಲಿ ಉಲ್ಲೇಖಿಸಿರುವ ಅವರು, ಮಹಿಳಾ ಸಿಬ್ಬಂದಿಗೆ ಕಿರುಕುಳ, ವರ್ಗಾವಣೆ ಆದೇಶ ಪಾಲಿಸದಿರುವುದು ಹಾಗೂ ಅಧಿಕಾರ ದುರುಪಯೋಗ ಸೇರಿದಂತೆ ವಿವಿಧ ವಿಚಾರಗಳ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಆರೋಪಗಳಿಗೆ ಸಂಬಂಧಿಸಿದಂತೆ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿರುವ ಸುಂದರ ಮಾಸ್ಟರ್, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.





