ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ಷಮೆಯಾಚನೆಗೆ ಒತ್ತಾಯಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳು ದಲಿತ ವಿರೋಧಿ ಮನೋಭಾವವನ್ನು ತೋರಿಸುತ್ತಿವೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.
ಪಕ್ಕದ ತಮಿಳುನಾಡು ರಾಜ್ಯದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಅವರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಆದರೂ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ನಿರಂತರವಾಗಿ ಕ್ಷಮೆಯಾಚನೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಖರ್ಗೆಯನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಬೇಕೆಂದು ಹೇಳುತ್ತಿರುವುದನ್ನು ಟೀಕಿಸಿದ ಅವರು, ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.
ಬಿಜೆಪಿ ಪಕ್ಷದ ಕೆಲ ದಲಿತ ನಾಯಕರೂ ಸಹ ಖರ್ಗೆಯವರ ವಿರುದ್ಧ ಟೀಕೆ ಮಾಡುತ್ತಿರುವುದು ವಿಷಾದನೀಯ. ವಿಶೇಷವಾಗಿ ಚಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗಳು ದಲಿತ ನಾಯಕತ್ವದ ವಿರುದ್ಧವೇ ಇರುವುದನ್ನು ತೋರಿಸುತ್ತವೆ ಎಂದು ಆರೋಪಿಸಿದರು.
ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳು ದಲಿತ ಸಮುದಾಯದ ವಿರುದ್ಧದ ಅವರ ನಿಲುವನ್ನು ಸ್ಪಷ್ಟಪಡಿಸುತ್ತಿವೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಅಭಿಪ್ರಾಯಪಟ್ಟಿದ್ದಾರೆ.







