ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಜನಸಾಮಾನ್ಯರು, ಮಧ್ಯಮ ವರ್ಗ, ರೈತರು, ಬಡವರು ಹಾಗೂ ಯುವಜನರ ಹಿತಾಸಕ್ತಿಗಳನ್ನು ಕಡೆಗಣಿಸಿ ಶ್ರೀಮಂತರು ಹಾಗೂ ಕಾರ್ಪೊರೇಟ್‌ಗಳಿಗೆ ಅನುಕೂಲವಾಗುವ ರೀತಿಯಲ್ಲಿ ಆಡಳಿತ ನಡೆಸುತ್ತಿದೆ ಎಂದು ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ಜನಸಾಮಾನ್ಯರು ಬ್ಯಾಂಕ್‌ಗಳು ಮತ್ತು ಎಟಿಎಂಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಯುಪಿಐ ವಹಿವಾಟುಗಳ ಮೇಲೆ ತೆರಿಗೆ ವಿಧಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ಇದರಿಂದ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಳಸುವ ಜನರ ಮೇಲೆಯೂ ಹೆಚ್ಚುವರಿ ಹೊರೆ ಹಾಕುವುದು ಸರಿಯಲ್ಲ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರ ಜನಸಾಮಾನ್ಯರ ಹಿತದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಯುವಜನರಿಗೆ ಉದ್ಯೋಗ, ರೈತರಿಗೆ ಸಮರ್ಪಕ ಬೆಲೆ ಹಾಗೂ ಬಡವರಿಗೆ ಆರ್ಥಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಕ್ರಮಗಳ ಬಗ್ಗೆ ಪ್ರಶ್ನೆಗಳು ಮೂಡಿವೆ ಎಂದರು.
ದೇಶದ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳ ಕುರಿತು ಕೂಡ ಸಮಗ್ರ ಪರಿಶೀಲನೆ ನಡೆಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರ ಹಾಗೂ ಚುನಾವಣಾ ವ್ಯವಸ್ಥೆಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಯುಪಿಐ ವಹಿವಾಟಿಗೆ ಸಂಬಂಧಿಸಿದ ತೆರಿಗೆ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟ ನಿಲುವು ಏನು ಎಂಬುದನ್ನು ಜನರಿಗೆ ತಿಳಿಸಬೇಕು. ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗುವ ಯಾವುದೇ ಕ್ರಮವನ್ನು ಕೈಗೊಳ್ಳಬಾರದು. ಈ ವಿಚಾರದಲ್ಲಿ ಜನರು ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರದ ನೀತಿಗಳನ್ನು ಪ್ರಶ್ನಿಸಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ಒತ್ತಾಯಿಸಿದ್ದಾರೆ.






