ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಯುವಜನರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.
ನೀಟ್ ಪರೀಕ್ಷಾ ಅಕ್ರಮ, ಮತಗಳ್ಳತನದ ಆರೋಪ ಹಾಗೂ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆ ನಡೆಸಿದಾಗ, ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಪ್ರತಿಭಟನಾಕಾರರನ್ನು ಜೈಲಿಗೆ ಕಳುಹಿಸುವ ಕ್ರಮ ಪ್ರಜಾಪ್ರಭುತ್ವದ ದೃಷ್ಟಿಯಿಂದ ಆತಂಕಕಾರಿ ಎಂದು ಅವರು ಟೀಕಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಯುವಜನರನ್ನು ತಮ್ಮ ವಿರೋಧಿಗಳಂತೆ ಪರಿಗಣಿಸಿ ಅವರ ವಿರುದ್ಧವೇ ಕ್ರಮ ಕೈಗೊಳ್ಳುತ್ತಿರುವುದು ದೇಶದ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ. ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ, ಖಾಸಗೀಕರಣ ಹಾಗೂ ಉದ್ಯೋಗಾವಕಾಶಗಳ ಕುಸಿತದಿಂದ ಯುವಜನರು ಸಂಕಷ್ಟ ಎದುರಿಸುವಂತಾಗಿದೆ ಎಂದು ಅವರು ದೂರಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ದೇಶದ 13 ಕೋಟಿ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇಂತಹ ಕ್ರಮಗಳಿಗೆ ಮುಂದಾಗಿದೆ ಎಂದು ಆರೋಪಿಸಿದರು.
ಯುವಜನರ ಉದ್ಯೋಗ, ಮತದಾನದ ಹಕ್ಕು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ದೇಶದ ಜನರು ಬೆಂಬಲ ನೀಡಬೇಕು. ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಜನತೆ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








