ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇದೇ ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12.30ಕ್ಕೆ ವಿಜಯ್ ಅವರು ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದೇವಸ್ಥಾನಕ್ಕೆ ಬರಲಿರುವ ಅವರು, ವಿಶೇಷ ಪೂಜೆ ಹಾಗೂ ದೇವರ ದರ್ಶನ ಮುಗಿಸಿ ಬಳಿಕ ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಮರಳಲಿದ್ದಾರೆ.
ವಿಜಯ್ ಅವರಿಗೆ ಝೆಡ್ ಪ್ಲಸ್ ಭದ್ರತೆ ಕಲ್ಪಿಸಿರುವ ಕಾರಣ ಅವರ ಭೇಟಿ ಸಂದರ್ಭದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ತಮಿಳುನಾಡು ಸಿಐಡಿ ಭದ್ರತಾ ವಿಭಾಗವು ಕರ್ನಾಟಕ ಪೊಲೀಸರಿಗೆ ಮನವಿ ಮಾಡಿದೆ.
ವಿಜಯ್ ಅವರು ಸಂಚರಿಸುವ ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವುದರಿಂದ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಭದ್ರತಾ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.







