ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯನಗರ ವಹಿಸಿದ್ದರು. ಸಂಘಟನೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರು ಗಾಂಧೀಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಗಾಂಧೀಜಿಯವರ ಜೀವನ, ಹೋರಾಟ ಹಾಗೂ ಸಮಾಜಕ್ಕೆ ನೀಡಿದ ಸಂದೇಶಗಳನ್ನು ಸ್ಮರಿಸಿದರು. ಗಾಂಧೀಜಿಯವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಸರಳತೆ, ಸ್ವಚ್ಛತೆ, ಸೇವಾ ಮನೋಭಾವ, ಸಾಮಾಜಿಕ ಸಾಮರಸ್ಯ ಮತ್ತು ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಗಾಂಧೀಜಿಯವರ ಆದರ್ಶಗಳನ್ನು ಕೇವಲ ಜಯಂತಿ ಆಚರಣೆ ಹಾಗೂ ಭಾಷಣಗಳಿಗೆ ಸೀಮಿತಗೊಳಿಸದೆ, ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ದುರ್ಬಲರು, ಸಂಕಷ್ಟದಲ್ಲಿರುವವರು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಮೂಲಕ ಸೇವಾ ಮನೋಭಾವ ಬೆಳೆಸುವುದು ಗಾಂಧೀಜಿಯವರ ಚಿಂತನೆಗಳಿಗೆ ಸಲ್ಲಿಸುವ ಗೌರವವಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಗಾಂಧಿ ಜಯಂತಿಯ ಅಂಗವಾಗಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವಾ ಕಾರ್ಯಕ್ರಮ ನಡೆಯಿತು. ಆಸ್ಪತ್ರೆಯಲ್ಲಿನ ರೋಗಿಗಳು ಹಾಗೂ ಮಕ್ಕಳ ಆರೋಗ್ಯ ವಿಚಾರಿಸಿದ ವೇದಿಕೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಣ್ಣುಹಂಪಲು ವಿತರಿಸಿದರು. ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಆತ್ಮೀಯವಾಗಿ ಮಾತನಾಡಿ ಧೈರ್ಯ ತುಂಬಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯನಗರ ಅವರ ನೇತೃತ್ವದಲ್ಲಿ ನಡೆದ ಸೇವಾ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ಸಂದೀಪ್ ಎ.ಎಸ್., ಮಕ್ಕಳ ತಜ್ಞ ಡಾ. ಅಮರನಾಥ ಶಾಸ್ತ್ರಿ, ಎಂಜಿನಿಯರ್ ಪ್ರಕಾಶ್ ಪೂಜಾರಿ ಹಾಗೂ ನರ್ಸಿಂಗ್ ಸೂಪರಿಂಟೆಂಡೆಂಟ್ ಫ್ಲೋರಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ, ಜಿಲ್ಲಾ ಉಪಾಧ್ಯಕ್ಷ ಮನೋಜ್ ಕೆ.ಜಿ. ರೋಡ್, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಶರತ್ ಆರೂರು, ಕಾಪು ಮಹಿಳಾ ಅಧ್ಯಕ್ಷೆ ಅನುಸೂಯ ಶೆಟ್ಟಿ, ಮಹಿಳಾ ಪ್ರಧಾನ ಕಾರ್ಯದರ್ಶಿ ಪವಿತ್ರ, ಉಪಾಧ್ಯಕ್ಷೆ ಗಾಯತ್ರಿ, ಜೊತೆ ಕಾರ್ಯದರ್ಶಿ ವನಿತಾ, ಮಹಿಳಾ ಸಂಘಟನಾ ಕಾರ್ಯದರ್ಶಿ ನಿರ್ಮಲಾ ಮೆಂಡನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ ಹಾಗೂ ಜಿಲ್ಲಾ ಸಹ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೈರಂಪಳ್ಳಿ ಘಟಕದ ಉಪಾಧ್ಯಕ್ಷ ಗುಣಾಕಾರ ಹಾಲಕ್ಕಿ, ಮಮತಾ, ರಾಜೇಶ್ವರಿ, ಹರಿಣಾಕ್ಷಿ, ಜಯಂತಿ ಆಚಾರ್ಯ, ರಂಜಿತಾ ಶೆಟ್ಟಿ, ವಸಂತಿ ಬಿಲ್ಲವ, ಗೀತಾ ಪೂಜಾರಿ, ಶ್ಯಾಮಲ, ಸಂತೋಷ್ ಶೆಟ್ಟಿ, ಜ್ಯೋತಿ ಬನ್ನಂಜೆ ಹಾಗೂ ಸುಲೋಚನಾ ಸೇರಿದಂತೆ ಮಹಿಳಾ ಘಟಕದ ಸದಸ್ಯರು ಮತ್ತು ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.





