ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ ನೀತಿ ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು.
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಆಯೋಜಿಸಿದ್ದ ಮಕ್ಕಳ ರಕ್ಷಣೆ ಹಾಗೂ ಮಕ್ಕಳ ರಕ್ಷಣಾ ನೀತಿ-2016 ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಇಂದಿನ ಮಕ್ಕಳೇ ನಾಳಿನ ಪ್ರಜೆಗಳು’ ಎಂಬ ನಿಲುವಿನ ಬದಲಿಗೆ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬುದನ್ನು ಸಮಾಜ ಅರಿತುಕೊಳ್ಳಬೇಕು. ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಸಾಕಷ್ಟು ಅರಿವಿರುವುದಿಲ್ಲ. ವಿಶೇಷವಾಗಿ ದುರ್ಬಲ ಮತ್ತು ಅಶಕ್ತ ಮಕ್ಕಳಿಗೆ ಸಂವಿಧಾನಬದ್ಧವಾಗಿ ದೊರೆತಿರುವ ಹಕ್ಕುಗಳ ಕುರಿತು ತಿಳಿಸುವುದು ಹಾಗೂ ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಉದ್ದೇಶದಿಂದ ಆಯೋಜಿಸುವ ಕಾರ್ಯಾಗಾರಗಳ ಪ್ರಯೋಜನ ತಳಮಟ್ಟದಲ್ಲಿಯೂ ಪರಿಣಾಮಕಾರಿಯಾಗಿ ತಲುಪಬೇಕು ಎಂದರು.
ಮಕ್ಕಳು ಸೂಕ್ಷ್ಮ ಮನೋಭಾವ ಹೊಂದಿರುವುದರಿಂದ ಅವರ ವಿಚಾರದಲ್ಲಿ ಸಂವೇದನಾಶೀಲವಾಗಿ ನಡೆದುಕೊಳ್ಳಬೇಕು. ಮಕ್ಕಳ ರಕ್ಷಣೆಗಾಗಿ ಹಲವು ಕಾಯಿದೆ ಮತ್ತು ಕಾನೂನುಗಳಿದ್ದರೂ ಬಾಲ್ಯವಿವಾಹ, ಶಾಲೆಯಿಂದ ಹೊರಗುಳಿಯುವ ಮಕ್ಕಳು ಹಾಗೂ ದುಶ್ಚಟಗಳಿಗೆ ಬಲಿಯಾಗುವ ಪ್ರಕರಣಗಳು ಮುಂದುವರಿದಿವೆ. ಇಂತಹ ಸಮಸ್ಯೆಗಳಿಗೆ ಕಡಿವಾಣ ಹಾಕಿ ಮಕ್ಕಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನಾಗರಿಕರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
17ರಿಂದ 18 ವರ್ಷ ವಯಸ್ಸು ಹದಿಹರೆಯದ ಸೂಕ್ಷ್ಮ ಹಂತವಾಗಿದ್ದು, ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಂದ ಈ ವಯಸ್ಸಿನ ಮಕ್ಕಳು ಹಲವು ಗೊಂದಲಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪೋಷಕರ ಜತೆಗೆ ಕಾಲೇಜು ಅಧ್ಯಾಪಕರ ಪಾತ್ರವೂ ಮಹತ್ವದ್ದಾಗಿದೆ. ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಈ ತರಬೇತಿ ಕಾರ್ಯಾಗಾರ ಮಹತ್ವದ್ದಾಗಿದೆ ಎಂದರು.
ಮಕ್ಕಳು ಭಿಕ್ಷಾಟನೆ, ಚಿಂದಿ ಆಯುವಿಕೆ, ಪೋಷಕರಿಂದಲೇ ದೌರ್ಜನ್ಯ ಹಾಗೂ ಶಾಲೆಯಿಂದ ಹೊರಗುಳಿಯುವಂತಹ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಮಕ್ಕಳಿಗೆ ಸಂಬಂಧಿಸಿದ ಅಹಿತಕರ ಘಟನೆಗಳು ನಡೆದಾಗ ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬೇಕು. ಈ ಮೂಲಕ ಕಾನೂನುಬದ್ಧವಾಗಿ ಮತ್ತು ಸೂಕ್ಷ್ಮವಾಗಿ ಸ್ಪಂದಿಸಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾಧ್ಯವಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ್ ಬಿ. ನಾಯಕ್ ಮಾತನಾಡಿ, ಪೋಷಕರೊಂದಿಗೆ ಹಂಚಿಕೊಳ್ಳಲಾಗದ ಹಲವು ವಿಚಾರಗಳನ್ನು ವಿದ್ಯಾರ್ಥಿಗಳು ಅಧ್ಯಾಪಕರೊಂದಿಗೆ ಹಂಚಿಕೊಳ್ಳುತ್ತಾರೆ. ಇಂತಹ ಸಂದರ್ಭಗಳಲ್ಲಿ ಸಂಕಷ್ಟದಲ್ಲಿರುವ ಮಕ್ಕಳನ್ನು ರಕ್ಷಿಸಲು ಅವರ ಹಕ್ಕುಗಳ ಬಗ್ಗೆ ಅಧ್ಯಾಪಕರಿಗೆ ಸ್ಪಷ್ಟ ಅರಿವಿರಬೇಕು. ಕಾರ್ಯಾಗಾರದಲ್ಲಿ ಭಾಗವಹಿಸಿರುವ ಪ್ರಾಂಶುಪಾಲರು ಮಾಹಿತಿ ಪಡೆದು ತಮ್ಮ ಕಾಲೇಜಿನ ಉಪನ್ಯಾಸಕರಿಗೂ ಮಕ್ಕಳ ರಕ್ಷಣೆಯ ಕುರಿತು ತಿಳಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಪೋಷಕರ ಕರ್ತವ್ಯವಲ್ಲ, ಅದು ಇಡೀ ಸಮಾಜದ ಜವಾಬ್ದಾರಿಯಾಗಿದೆ. 18 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಮ್ಮ ಹಕ್ಕುಗಳನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸಬೇಕು. ಕುಟುಂಬ, ಸಮಾಜ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂತಹ ಕಾರ್ಯಾಗಾರಗಳು ಸಹಕಾರಿಯಾಗಲಿವೆ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘ಹದಿಹರೆಯದ ಕಾವಲುಗಾರ’ ವಿಷಯದಡಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆಯಲ್ಲಿ ಪ್ರಾಂಶುಪಾಲರ ಪಾತ್ರದ ಕುರಿತು ಮಾಹಿತಿ ನೀಡಿದರು. ಪ್ರಸ್ತುತ ಹದಿಹರೆಯದ ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, 18 ವರ್ಷದೊಳಗಿನ ಹೆಣ್ಣುಮಕ್ಕಳ ಗರ್ಭಧಾರಣೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ ಸರ್ಕಾರ ಜಾರಿಗೊಳಿಸಿರುವ ರಕ್ಷಣಾ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ದತ್ತು ಮಾಸಾಚರಣೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ದತ್ತು ಮಾಸಾಚರಣೆಯ ಘೋಷವಾಕ್ಯದ ಪ್ರತಿಜ್ಞಾವಿಧಿಯನ್ನೂ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಕ್ಕಳ ರಕ್ಷಣಾ ಘಟಕದ ಯೋಜನಾ ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.






