ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನವೆಂಬರ್ 11ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ವಿಶೇಷ ಚೇತನ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನಡೆಸಿದ ಪಥಸಂಚಲನವು ಅವರಿಗೆ ತರಬೇತಿ ನೀಡಿದ ಸಂಸ್ಥೆಗಳು ಹಾಗೂ ಪೋಷಕರ ಬದ್ಧತೆಗೆ ಸಾಕ್ಷಿಯಾಗಿದೆ. ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ವಿಶೇಷ ಚೇತನ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಪ್ರೀತಿಯಿಂದ ಆರೈಕೆ ಮಾಡುತ್ತಿರುವ ಸಂಸ್ಥೆಗಳ ಕಾರ್ಯವನ್ನು ಶ್ಲಾಘಿಸಿದರು. ಅಲ್ಲದೆ, ಇಂತಹ ಕ್ರೀಡಾಕೂಟಗಳ ಮಹತ್ವವನ್ನು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷೆ ಚಂದ್ರಿಕಾ ಜೆ.ಪಿ., ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಉಡುಪಿ ಜಿಲ್ಲಾ ಪಾಲಕರ ಸಂಘದ ಅಧ್ಯಕ್ಷ ಜಯವಿಠಲ್ ಹಾಗೂ ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್ ಉಪಸ್ಥಿತರಿದ್ದರು.
ಪಥಸಂಚಲನದಲ್ಲಿ ವಿಜೇತರು: ವಿಜೇತ ಶಾಲೆ ಪ್ರಥಮ ಸ್ಥಾನ, ಮಾನಸಾ ಸ್ಪೆಷಲ್ ಸ್ಕೂಲ್ ದ್ವಿತೀಯ ಹಾಗೂ ಕಾರುಣ್ಯ ಸ್ಪೆಷಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು.
ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಎಚ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







