ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕರ್ನಾಟಕ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು ಖಂಡಿಸಿ, ಅದನ್ನು “ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಆರೋಪಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಜನಸಾಮಾನ್ಯರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಹೇಳಿ, ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಹಾಗೂ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.
ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಬ್ರಹ್ಮಗಿರಿ ವೃತ್ತದಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು.

ಪ್ರತಿಭಟನೆಯಲ್ಲಿ ಅಲೆವೂರು ಹರೀಶ್ ಕಿಣಿ, ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಳೇಬೈಲ್, ವೆರೋನಿಕಾ ಕರ್ನೆಲಿಯೋ, ಡಾ. ಸುನೀತಾ ಶೆಟ್ಟಿ, ರೋಶನ್ ಒಲಿವರಾ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ನಾಗೇಶ್ ಉದ್ಯಾವರ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






