ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್ಯಾಲಿಯ ಬಳಿಕ ನಡೆದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯದ ವಿರುದ್ಧ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆ ಮೂಲಕ ಬ್ರಹ್ಮಗಿರಿ ಸರ್ಕಲ್ಗೆ ಆಗಮಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎಂ ಗಫೂರ್ ಮಾತನಾಡಿ, ಜಾತಿವಾದಿ ಕೃತ್ಯದ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಕೃತ್ಯವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್ಐಆರ್ನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ವಕ್ತಾರೆ ವರೋನಿಕಾ ಕರ್ನೆಲಿಯೋ ಮಾತನಾಡಿ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಜಾಪ್ರಭುತ್ವದ ಬುನಾದಿಯೇ ಅಲುಗಾಡುತ್ತಿದೆ. ಸಂವಿಧಾನದ ಧ್ವನಿಯನ್ನು ಧಮನಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ಆರೋಪಿಸಿದರು.
ಯುವಜನತೆಯಲ್ಲಿ ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ಭಯ ಆರಂಭವಾಗಿದೆ. ಹೀಗಾಗಿ ಎಫ್ಐಆರ್ ದಾಖಲಿಸುವ ಮೂಲಕ ಅವರ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಸುರೇಶ್ ಶೆಟ್ಟಿ ಬನ್ನಂಜೆ, ಗೀತಾ ವಾಗ್ಳೆ, ಸತೀಶ್ ಕೊಡವೂರು, ದಯಾನಂದ ಪಿ., ಗಣೇಶ್ ನೆರ್ಗಿ, ಕೃಷ್ಣ ಶೆಟ್ಟಿ ಬಜಗೋಳಿ, ಶಶಿಧರ ಶೆಟ್ಟಿ ಎರ್ಮಾಳ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





