ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ದೇಶವ್ಯಾಪಿ ‘ವೋಟ್ ಬಚಾವೋ–ದೇಶ್ ಬಚಾವೋ’ ಜನಾಂದೋಲನ ಹಮ್ಮಿಕೊಂಡಿದೆ ಎಂದು ಎಐಸಿಸಿ ವೀಕ್ಷಕ, ಸಿಡಬ್ಲ್ಯುಸಿ ಸದಸ್ಯ ಹಾಗೂ ಮಾಜಿ ಸಚಿವ ಕಮಲೇಶ್ವರ ಪಟೇಲ್ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಚಳವಳಿಯನ್ನು ಯಶಸ್ವಿಗೊಳಿಸಲು ಸಮಗ್ರ ಕ್ರಿಯಾ ಯೋಜನೆ ರೂಪಿಸಲಾಗಿದೆ. ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಪ್ರತಿ ಜಿಲ್ಲೆಯಿಂದ ಕನಿಷ್ಠ 100 ಕಾರ್ಯಕರ್ತರು ಭಾಗವಹಿಸುವಂತೆ ಜಿಲ್ಲಾ, ಬ್ಲಾಕ್ ಹಾಗೂ ಗ್ರಾಮಾಂತರ ಮಟ್ಟದಲ್ಲಿ ಮಾರ್ಗದರ್ಶನ ನೀಡಲಾಗುವುದು ಎಂದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ, ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ಅಮಾನತು, ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎನ್ನಲಾದ 13.3 ಕೋಟಿ ಹೆಸರುಗಳ ಮರುಸ್ಥಾಪನೆ ಹಾಗೂ ಗಂಭೀರ ವ್ಯತ್ಯಾಸಗಳ ಕುರಿತು ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲಾದ ಪ್ರತಿಯೊಬ್ಬರಿಗೂ ಸ್ಪಷ್ಟ ಮಾಹಿತಿ ನೀಡಬೇಕು. ತಮ್ಮ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವುದನ್ನು ಪ್ರಶ್ನಿಸಲು ಮತ್ತು ಮರುಸ್ಥಾಪನೆಗೆ ಮನವಿ ಸಲ್ಲಿಸಲು ಮತದಾರರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ರಾಧಾ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಯಿರುವ ಕ್ಷೇತ್ರಗಳಲ್ಲಿ ಮತಗಳನ್ನು ಕಸಿಯುವ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು. ನವೆಂಬರ್ 5ರಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ವೋಟ್ ಬಚಾವೋ–ದೇಶ್ ಬಚಾವೋ’ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಇದೇ ಮಾದರಿಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಅರ್ಹ ಮತದಾರರ ಹೆಸರುಗಳನ್ನು ಅಳಿಸಲು ಅಕ್ರಮವಾಗಿ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕರಾವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ನಿಗಮದ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಮಾಜಿ ಶಾಸಕ ಗೋಪಾಲ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ದಿನಕರ ಹೇರೂರು, ಪ್ರಸಾದ್ ರಾಜ್ ಕಾಂಚನ್, ರಾಜು ಪೂಜಾರಿ, ದಿನೇಶ್ ಮೊಳಹಳ್ಳಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಸೇರಿದಂತೆ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಕಿಣಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.







