ಜನರನ್ನು ತಲುಪಲು ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಅತ್ಯಂತ ಅಗತ್ಯ. ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿರುವುದು ಹೆಮ್ಮೆಯ ವಿಚಾರ. ಕಲೆ, ಭಾಷೆ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ತುಳುನಾಡು ರಾಜ್ಯದ ಅಭಿವೃದ್ಧಿಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಹತ್ವದ ಕೊಡುಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪ್ರದೇಶಗಳು ಬದಲಾದಂತೆ ಅಲ್ಲಿನ ಕಲೆ, ಸಂಸ್ಕೃತಿ ಹಾಗೂ ಭಾಷೆಗಳು ವಿಭಿನ್ನವಾಗಿರುತ್ತವೆ. ಯಾವುದೇ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದರೂ ಅಲ್ಲಿನ ಭಾಷೆ ಮತ್ತು ಸಂಸ್ಕೃತಿಯನ್ನು ಅರಿತುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಭಾಷೆಗಳ ಕಲಿಕೆ ಕೇವಲ ಒಂದು ಭಾಷೆಗೆ ಸೀಮಿತವಾಗಬಾರದು. ಮಾತೃಭಾಷೆಯೊಂದಿಗೆ ವಿವಿಧ ಭಾಷೆಗಳನ್ನು ಕಲಿಯುವುದರ ಜೊತೆಗೆ ಭಾಷೆಯ ಕುರಿತ ಜ್ಞಾನವನ್ನೂ ಹೆಚ್ಚಿಸಿಕೊಳ್ಳಬೇಕು ಎಂದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ. ವಿ.ಕೆ. ಯಾದವ್ ಉಪಸ್ಥಿತರಿದ್ದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸದಸ್ಯರಾದ ಉದ್ಯಾವರ ನಾಗೇಶ್ ಕುಮಾರ್ ನಿರೂಪಿಸಿದರು. ಸಂತೋಷ್ ಶೆಟ್ಟಿ ಹಿರಿಯಡ್ಕ ವಂದಿಸಿದರು.







