ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ, ಫೈಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ, ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ/ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಮಳೆ ಈಗಾಗಲೇ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮಳೆಯ ನೀರು ವಿವಿಧೆಡೆ ನಿಂತು ಸೊಳ್ಳೆಗಳ ಸಂತಾನೋತ್ಪತ್ತಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ, ಫೈಲೇರಿಯಾ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ರೋಗಗಳ ತಡೆ ಹಾಗೂ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಸ್ವಚ್ಛ ಪರಿಸರವು ಉತ್ತಮ ಆರೋಗ್ಯದ ಮೂಲವಾಗಿದೆ. ಸಾರ್ವಜನಿಕರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸ್ಥಳೀಯ ಸಂಸ್ಥೆಗಳೊಂದಿಗೆ ಸಹಕರಿಸಬೇಕು. ಪರಿಸರ ಸ್ವಚ್ಛತೆಯ ಬಗ್ಗೆ ಸರ್ಕಾರ ಮಾತ್ರ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನೂ ತನ್ನ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಮಳೆಗಾಲದಲ್ಲಿ ಟೈರುಗಳು, ಎಳನೀರಿನ ಚಿಪ್ಪುಗಳು, ಬಳಕೆಯಾಗದ ಪಾತ್ರೆಗಳು ಹಾಗೂ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಲಾರ್ವಾಗಳು ಉತ್ಪತ್ತಿಯಾಗುತ್ತವೆ. ಇಂತಹ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ನಿರ್ಮೂಲನೆ ಮಾಡಬೇಕು. ಹೋಟೆಲ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸಿದರೆ ಸ್ಥಳೀಯ ಸಂಸ್ಥೆಗಳು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಳೆದ ಕೆಲವು ವರ್ಷಗಳಿಂದ ಡೆಂಗ್ಯೂ, ಮಲೇರಿಯಾ ಹಾಗೂ ಚಿಕೂನ್‌ಗುನ್ಯಾ ಪ್ರಕರಣಗಳು ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳು ಮಳೆಯ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರ ತಂಡಗಳು ಮನೆ ಮನೆಗೆ ಭೇಟಿ ನೀಡಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ಪತ್ತೆಹಚ್ಚಿ ನಿರ್ಮೂಲನೆ ಮಾಡುವುದರ ಜೊತೆಗೆ ಆರೋಗ್ಯ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಹೊರ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಿಂದ ಉದ್ಯೋಗಕ್ಕಾಗಿ ಜಿಲ್ಲೆಗೆ ಆಗಮಿಸುವ ಕಾರ್ಮಿಕರಿಂದಲೂ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಸಂಸ್ಥೆಗಳು ಹಾಗೂ ಕಾರ್ಮಿಕ ಗುತ್ತಿಗೆದಾರರ ಸಭೆಗಳನ್ನು ಆಯೋಜಿಸಿ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು. ಕಾರ್ಮಿಕರ ಆರೋಗ್ಯ ತಪಾಸಣೆಯ ಮೇಲೂ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮೀನುಗಾರಿಕೆ ಚಟುವಟಿಕೆಗಳಿಗೆ ತಾತ್ಕಾಲಿಕ ನಿರ್ಬಂಧ ಇರುವ ಕಾರಣ ಬಂದರು ಪ್ರದೇಶಗಳಲ್ಲಿ ಬೋಟುಗಳು ನಿಲುಗಡೆಯಾಗಿವೆ. ಬೋಟುಗಳ ಟ್ಯಾಂಕ್‌ಗಳು ಹಾಗೂ ಟೈರುಗಳಲ್ಲಿ ಮಳೆಯ ನೀರು ನಿಂತು ಸೊಳ್ಳೆಗಳ ಸಂತಾನೋತ್ಪತ್ತಿಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಮೀನುಗಾರಿಕೆ ಹಾಗೂ ಬಂದರು ಇಲಾಖೆಗಳು ಈ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ತೋಟಗಾರಿಕಾ ಬೆಳೆಗಳಾದ ಅಡಿಕೆ ತೋಟಗಳ ಹಾಳೆಗಳು, ಅನಾನಸ್ ಗಿಡಗಳ ಎಲೆಗಳ ಸಂಧಿಗಳು ಹಾಗೂ ರಬ್ಬರ್ ಸಂಗ್ರಹಿಸುವ ಟಬ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ರೈತರಲ್ಲಿ ಈ ಕುರಿತು ಜಾಗೃತಿ ಮೂಡಿಸಿ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಲು ಸಹಕರಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ವಿದ್ಯಾರ್ಥಿನಿಲಯಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು. ಕಲ್ಲು ಕ್ವಾರಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ತಾತ್ಕಾಲಿಕ ಕ್ವಾರಿಗಳಲ್ಲಿ ಲಾರ್ವಿಸೈಡ್ ಸಿಂಪಡಣೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಡೆಯುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಪಂಚಾಯತ್‌ನಲ್ಲೂ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಗಳ ಸಭೆ ನಡೆಸಿ ಸಾಂಕ್ರಾಮಿಕ ರೋಗಗಳ ತಡೆಗೆ ಕಾರ್ಯಯೋಜನೆ ರೂಪಿಸಬೇಕು. ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸ್ಥಳೀಯ ಸಂಸ್ಥೆಗಳು ದಂಡಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






