ಭಾರತಕ್ಕೆ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಉಡುಪಿಯಲ್ಲಿ ಏಪ್ರಿಲ್ 26ರಂದು ಬೃಹತ್ ದೇಶಾಭಿಮಾನಿ ಸಮಾವೇಶವನ್ನು ಆಯೋಜಿಸಲಾಗಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದ, ಉಡುಪಿ ಜಿಲ್ಲೆ ವತಿಯಿಂದ, ಸಹಬಾಳ್ವೆ ಉಡುಪಿ, ಸಿಐಟಿಯು ಭಾರತೀಯ ಕ್ರೈಸ್ತ ಒಕ್ಕೂಟ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸೇರಿದಂತೆ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಈ ಸಮಾವೇಶ ನಡೆಯಲಿದೆ. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

“ನನ್ನ ಭಾರತ – ನನ್ನ ಹೆಮ್ಮೆ” ಎಂಬ ಘೋಷವಾಕ್ಯದೊಂದಿಗೆ ನಡೆಯಲಿರುವ ಈ ಸಮಾವೇಶದಲ್ಲಿ ಅಂಬೇಡ್ಕರ್ ಅವರ ಸಂವಿಧಾನ ಚಿಂತನೆಗಳು, ಸಮಾನತೆ, ಸರ್ವಧರ್ಮ ಸಮಭಾವ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಮಹತ್ವವನ್ನು ಪುನರುಚ್ಚರಿಸಲಾಗುತ್ತದೆ.
ಕಾರ್ಯಕ್ರಮದ ಅಂಗವಾಗಿ ಭವ್ಯ ಸಾಂಸ್ಕೃತಿಕ ಜಾಥಾ, ಪ್ರತಿಭಾ ಸನ್ಮಾನ ಮತ್ತು “ಭೀಮ ಸಾರಥಿ” ಪ್ರಶಸ್ತಿ ಪ್ರದಾನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತದೆ.

ಖ್ಯಾತ ನಟ ದುನಿಯಾ ವಿಜಯ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಸಮಾವೇಶದ ಪ್ರಮುಖ ಭಾಷಣ ಮಾಡಲಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ತತ್ವಗಳು ಮತ್ತು ಸಂವಿಧಾನದ ಮೌಲ್ಯಗಳು ಇಂದಿನ ಭಾರತದಲ್ಲಿ ಇನ್ನಷ್ಟು ಅಗತ್ಯವಾಗಿವೆ ಎಂದು ಸಂಘಟಕರು ತಿಳಿಸಿದ್ದಾರೆ. ಶೋಷಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಅವರ ಚಿಂತನೆಗಳು ದಿಕ್ಕು ತೋರಿಸುತ್ತವೆ ಎಂಬುದನ್ನು ಒತ್ತಿ ಹೇಳಲಾಗಿದೆ.
ಸಮಾಜದಲ್ಲಿ ಸಮಾನತೆ, ಪ್ರೀತಿ, ಪರಸ್ಪರ ಗೌರವ ಮತ್ತು ವಿಶ್ವಾಸವನ್ನು ಬಲಪಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದ್ದು, ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕರಾದ ಶಾಮ್ ರಾಜ್ ಬಿರ್ತಿ ಅವರು, ಉಡುಪಿಯಲ್ಲಿ ದೇಶಾಭಿಮಾನಿ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಇದು ಇಂದಿನ ಪರಿಸ್ಥಿತಿಯಲ್ಲಿ ಅತ್ಯಂತ ಅಗತ್ಯವಾದ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ದೇಶ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬುದು ಸ್ಪಷ್ಟವಾಗದ ಸ್ಥಿತಿ ನಿರ್ಮಾಣವಾಗಿದ್ದು, ದೇಶಾದ್ಯಂತ ದಲಿತರು, ದಮನಿತರು ಹಾಗೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ, ಅವರು ಈ ದೇಶದ ಪ್ರಜೆಗಳೇ ಅಲ್ಲ ಎಂಬಂತೆ ಬಿಂಬಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ “ನಾವು ಈ ದೇಶದ ಮೂಲ ನಿವಾಸಿಗಳು, ನಮ್ಮ ಭಾರತ ನನ್ನ ಹೆಮ್ಮೆ” ಎಂಬ ಧ್ಯೇಯವಾಕ್ಯದೊಂದಿಗೆ ಏಪ್ರಿಲ್ 26ರಂದು ಉಡುಪಿಯ ಕ್ರಿಸ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ದೇಶಾಭಿಮಾನಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅದರ ಜೊತೆಗೆ ಅದೇ ದಿನ ಸಾಂಸ್ಕೃತಿಕ ಜಾಥಾ ಕೂಡ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ನಟ ದುನಿಯಾ ವಿಜಯ್ ಉದ್ಘಾಟಿಸಲಿದ್ದು, ಮುಖ್ಯ ಭಾಷಣವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್ ಮಾಡಲಿದ್ದಾರೆ. ಸುಮಾರು 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಈಗಾಗಲೇ ಹಳ್ಳಿ-ಹಳ್ಳಿಗಳಲ್ಲಿ ಪ್ರಚಾರ ಕಾರ್ಯಗಳು ಜೋರಾಗಿ ನಡೆಯುತ್ತಿವೆ.

ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸಂವಿಧಾನ ಪ್ರೇಮಿಗಳನ್ನು ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದರು.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.






