ಉಡುಪಿ ಜಿಲ್ಲೆಯ ಕಾಪು ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಆರೋಪಿಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಏಪ್ರಿಲ್ 2ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ, ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿಯಾಗಿದ್ದು, ಈತನ ವಿರುದ್ಧ ನಾಲ್ಕು ಕೊಲೆ ಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ವಿಜೇತನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಇದೇ ವೇಳೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್, ಎಲ್ಲೂರು ಗ್ರಾಮದ ಮುದರಂಗಡಿ ನಿವಾಸಿಯಾಗಿದ್ದು, ಈತನ ವಿರುದ್ಧ ಐದು ಕೊಲೆ ಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ.
ಈ ಹಿನ್ನೆಲೆಯಲ್ಲಿ ಆರೀಫ್ ಸಾಹೇಬ್ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.





