ದಲಿತ ಮಹಿಳಾ ಒಕ್ಕೂಟ ಉಡುಪಿ ಜಿಲ್ಲೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ಒಂದು ದಿನದ ಕೌಶಲಾಭಿವೃದ್ಧಿ ಹಾಗೂ ಮಾಹಿತಿ ಕಾರ್ಯಾಗಾರ ಇಂದು ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು

ಕಾರ್ಯಕ್ರಮವನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಜೀವನದಲ್ಲಿ ಧನಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
“ಮಹಿಳೆಯರಲ್ಲಿ ಮನೋಬಲ ಇದ್ದರೆ ಎಲ್ಲವೂ ಸಾಧ್ಯ. ಆದರೆ ಋಣಾತ್ಮಕ ಮನೋಭಾವನೆಯನ್ನು ಬೆಳೆಸಿಕೊಂಡರೆ ಎಲ್ಲವೂ ಅಸಾಧ್ಯ ಎಂಬ ಭಾವನೆ ಮೂಡುತ್ತದೆ. ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಚಿಂತನೆ ಜೀವನದಲ್ಲಿ ಯಶಸ್ಸು ಸಾಧಿಸಲು ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಅವರು ಹೇಳಿದರು.

ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಜೊತೆಗೆ, ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡಬೇಕು. ಶಿಕ್ಷಣ, ಕೌಶಲ್ಯ ಮತ್ತು ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗಲು ಸಾಧ್ಯ ಎಂದು ಅವರು ತಿಳಿಸಿದರು.

ಬ್ರಹ್ಮಾವರದ ರುಡ್‌ಸೆಟ್ ಕೇಂದ್ರದ ಮುಖ್ಯ ಪ್ರಬಂಧಕ ಡಾ. ಎಂ. ಬೊಮ್ಮಯ್ಯ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗುವ ಅಗತ್ಯವನ್ನು ಒತ್ತಿ ಹೇಳಿದರು. ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ತಮ್ಮ ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಕೌಶಲ್ಯಗಳನ್ನು ಕಲಿತು ಸ್ವಂತ ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದರು.
“ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಹಾಗೂ ಸಮಾನತೆಗೆ ವಿಶೇಷ ಮಹತ್ವ ನೀಡಿದ್ದರು. ದೇಶದ ಎಲ್ಲಾ ಜಾತಿ ಮತ್ತು ಧರ್ಮಗಳ ಮಹಿಳೆಯರಿಗೂ ಸಮಾನ ಹಕ್ಕು ಮತ್ತು ಅವಕಾಶ ದೊರೆಯಬೇಕು ಎಂಬ ಆಶಯ ಸಂವಿಧಾನದಲ್ಲಿ ಅಡಕವಾಗಿದೆ” ಎಂದು ಅವರು ಹೇಳಿದರು.
ಮಹಿಳೆಯರು ಕೇವಲ ಉದ್ಯೋಗಾವಕಾಶಗಳನ್ನು ಹುಡುಕುವುದಕ್ಕಿಂತ ತಮ್ಮಲ್ಲಿರುವ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಉದ್ಯಮಶೀಲತೆಯತ್ತ ಸಾಗಬೇಕು. ಇದರಿಂದ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಸಮಾಜದಲ್ಲಿಯೂ ಮಹಿಳೆಯರ ಸ್ವಾವಲಂಬನೆ ಹೆಚ್ಚುತ್ತದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಹಕ್ಕುಗಳ ಬಗ್ಗೆ ಅರಿವು ಹೊಂದಿರುವುದು ಅಗತ್ಯ. ಆದರೆ ವೈಯಕ್ತಿಕವಾಗಿ ಹಕ್ಕುಗಳಿಗಾಗಿ ಧ್ವನಿ ಎತ್ತುವುದಕ್ಕಿಂತ ಸಂಘಟಿತರಾಗಿ ಹೋರಾಟ ನಡೆಸಿದಾಗ ಅದರ ಪರಿಣಾಮ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಅವರು ಹೇಳಿದರು.
ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರು ತಮ್ಮ ಹಕ್ಕುಗಳು, ಸರ್ಕಾರದ ಸೌಲಭ್ಯಗಳು ಮತ್ತು ಸಂವಿಧಾನ ನೀಡಿರುವ ಅವಕಾಶಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಮಾಹಿತಿ ಕೊರತೆಯಿಂದಾಗಿ ಅರ್ಹರಾಗಿದ್ದರೂ ಅನೇಕರು ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳಿಂದ ವಂಚಿತರಾಗುತ್ತಿರುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಬೇಕು ಎಂದರು.

ಮಹಿಳೆಯರ ಸಂಘಟಿತ ಶಕ್ತಿಯೇ ಸಾಮಾಜಿಕ ಬದಲಾವಣೆಗೆ ಪ್ರಮುಖ ಆಧಾರ ಎಂದು ಸುಂದರ ಮಾಸ್ತರ್ ಹೇಳಿದರು. ಮಹಿಳೆಯರು ತಮ್ಮ ಸಮಸ್ಯೆಗಳನ್ನು ವೈಯಕ್ತಿಕ ಸಮಸ್ಯೆಗಳೆಂದು ಪರಿಗಣಿಸದೆ, ಅವುಗಳ ಸಾಮಾಜಿಕ ಆಯಾಮವನ್ನು ಅರ್ಥಮಾಡಿಕೊಂಡು ಒಗ್ಗಟ್ಟಿನಿಂದ ಪರಿಹಾರ ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಹಕ್ಕುಗಳನ್ನು ನೀಡಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಶೋಷಿತರು, ಮಹಿಳೆಯರು ಮತ್ತು ಅವಕಾಶಗಳಿಂದ ವಂಚಿತರಾದ ಎಲ್ಲ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಅವು ಮಾರ್ಗದರ್ಶನ ನೀಡುತ್ತವೆ ಎಂದು ಅವರು ತಿಳಿಸಿದರು.

ರಾಜ್ಯ ಸಂಘಟನಾ ಸಂಚಾಲಕಿ ವಸಂತಿ ಶಿವಾನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಶಂಕರ್ ಮಲ್ಲಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವಿಜಯ ಲಕ್ಷ್ಮೀ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದೀಪಾರವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಲಭ್ಯವಿರುವ ವಿವಿಧ ಸರ್ಕಾರಿ ಯೋಜನೆಗಳು, ಕೌಶಲಾಭಿವೃದ್ಧಿ ತರಬೇತಿ, ಸ್ವ-ಉದ್ಯೋಗ, ಆರ್ಥಿಕ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಿದರು. ಸ್ವ ಉದ್ಯೋಗದ ನೇರ ಪ್ರಾತಕ್ಷಿಕೆ ನಡೆಸಿಕೊಟ್ಟ ಪ್ರಮೀಳ ಬಾರ್ಕೂರು, ಸ್ಥಳದಲ್ಲೇ ಸಾಬೂನು ತಯಾರಿಸಿ ಮಹಿಳೆಯರಿಗೆ ಮಾಹಿತಿ ನೀಡಿದರು.

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಪ್ರಾಸ್ತವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸುಂದರ ಗುಜ್ಜರ್‌ಬೆಟ್ಟು, ಗೀತಾ ಸುರೇಶ್ ಕುಮಾರ್ ಸೇರಿದಂತೆ ಜಿಲ್ಲೆಯ ಮಹಿಳಾ ನಾಯಕೀಯರು ಉಪಸ್ಥಿರಿದ್ದರು. ಚೈತ್ರ ಯಡ್ತರೆ ಕಾರ್ಯಕ್ರಮ ನಿರೂಪಪಿಸಿದರು.















