ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ಘಟಕದ ಮಹಿಳಾ ಮೀನುಗಾರ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ನಿರೀಕ್ಷಾ ಮೆಂಡನ್ ಅವರು ಅಧಿಕಾರ ಸ್ವೀಕರಿಸಿದರು. ಅವರ ಪದಪ್ರದಾನ ಸಮಾರಂಭವು ಆಗಸ್ಟ್ 30ರಂದು ಮಲ್ಪೆಯ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಅದ್ದೂರಿಯಾಗಿ ನಡೆಯಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಬಿ. ಸುಣಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಕರಾವಳಿ ಭಾಗದ ಆರ್ಥಿಕತೆ ಹಾಗೂ ಸಾಮಾಜಿಕ ಬದುಕಿನಲ್ಲಿ ಮೀನುಗಾರ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ. ಮೀನುಗಾರ ಕುಟುಂಬಗಳ ಸಮಸ್ಯೆಗಳನ್ನು ಸರ್ಕಾರದ ಹಾಗೂ ಪಕ್ಷದ ಗಮನಕ್ಕೆ ತರುವಲ್ಲಿ ಮಹಿಳೆಯರ ಪಾತ್ರವೂ ಪ್ರಮುಖವಾಗಿದ್ದು, ಮಹಿಳಾ ಮೀನುಗಾರರನ್ನು ಸಂಘಟಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮೀನುಗಾರಿಕೆ ಕ್ಷೇತ್ರದಲ್ಲಿ ಮಹಿಳೆಯರು ಹಲವು ರೀತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೂ, ಅವರ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಧ್ವನಿ ಸಿಗುತ್ತಿಲ್ಲ. ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಹೊಸ ಅಧ್ಯಕ್ಷೆ ನಿರೀಕ್ಷಾ ಮೆಂಡನ್ ಅವರ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಬಿ. ಸುಣಗಾರ, ಮೀನುಗಾರ ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಸಂಘಟನಾತ್ಮಕ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಿರೀಕ್ಷಾ ಮೆಂಡನ್ ಅವರ ನೇಮಕವು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಪದಪ್ರದಾನ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ನೀತಿ ಸಂಶೋಧನೆ ಮತ್ತು ತರಬೇತಿ ವಿಭಾಗದ ಸಂಯೋಜಕ ಹರಿಪ್ರಸಾದ್ ರೈ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಶಿಧರ್ ಶೆಟ್ಟಿ, ಮೀನುಗಾರರ ವಿಭಾಗದ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸರ್ಪುದ್ದೀನ್, ರಾಜ್ಯ ಮೀನುಗಾರರ ವಿಭಾಗದ ಕಾರ್ಯದರ್ಶಿ ಉಪೇಂದ್ರ ಮೆಂಡನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಹಾಬಲ ಕುಂದರ್, ಕೆಪಿಸಿಸಿ ಸದಸ್ಯ ಶಂಕರ ಕುಂದರ್, ಮೀನುಗಾರ ಮುಖಂಡ ಮದನ್ ಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನಿರೀಕ್ಷಾ ಮೆಂಡನ್ ಅವರಿಗೆ ಅಧಿಕೃತವಾಗಿ ಜವಾಬ್ದಾರಿ ಹಸ್ತಾಂತರಿಸಿ ಶುಭ ಹಾರೈಸಲಾಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮೀನುಗಾರ ಸಮುದಾಯದ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರು ನೂತನ ಅಧ್ಯಕ್ಷೆಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಈದಿನ.ಕಾಮ್ ಜೊತೆ ಮಾತನಾಡಿದ ನಿರೀಕ್ಷಾ ಮೆಂಡನ್, ಉಡುಪಿ ಜಿಲ್ಲೆಯ ಕರಾವಳಿ ಭಾಗದಲ್ಲಿ ಮೀನುಗಾರ ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮಹಿಳೆಯರ ಮೂಲಕ ಸಂಘಟಿತ ಧ್ವನಿ ರೂಪಿಸುವುದು, ಮೀನುಗಾರ ಕುಟುಂಬಗಳ ಮಹಿಳೆಯರನ್ನು ಸಂಘಟನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಸೆಯುವುದು ಹಾಗೂ ಅವರ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹಾರಕ್ಕಾಗಿ ಪ್ರಯತ್ನಿಸುವುದು ಮುಂದಿನ ದಿನಗಳಲ್ಲಿ ಮಹಿಳಾ ಮೀನುಗಾರ ವಿಭಾಗದ ಪ್ರಮುಖ ಕಾರ್ಯಚಟುವಟಿಕೆಗಳಾಗಲಿವೆ ಎಂದು ಹೇಳಿದರು.







