ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 3ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 7ರ ಬೆಳಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅನ್ವಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ವರೂಪ ಟಿ.ಕೆ. ಅವರು ಈ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನುಮತಿಯಿಲ್ಲದೆ ಸಭೆ, ಮೆರವಣಿಗೆ, ಪ್ರತಿಭಟನೆ ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗುವುದು, ಪ್ರಚೋದನಕಾರಿ ಭಾಷಣ ಹಾಗೂ ಘೋಷಣೆಗಳನ್ನು ಕೂಗುವುದು ಮತ್ತು ಅಪಾಯಕಾರಿ ವಸ್ತುಗಳನ್ನು ಕೊಂಡೊಯ್ಯುವುದು ಅಥವಾ ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದ್ದು, ಸಾರ್ವಜನಿಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.







