ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಜಾತಿ ನಿಂದನೆ ಹಾಗೂ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆ.6ರಂದು ನೊಂದ ಮಹಿಳೆಯೊಬ್ಬರು ಕೊಲ್ಲೂರು ಪೊಲೀಸ್ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ, ಸನತ್ ಕುಂದಾಪುರ ಎಂಬಾತ ತನ್ನ ಮನೆಯ ಸಮೀಪ ಬಂದು ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿ ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 51/2026ರಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಇದೇ ಸಂದರ್ಭದಲ್ಲಿ, ನೊಂದ ಮಹಿಳೆಯ ಕುಟುಂಬಸ್ಥರು ಯುವಕನನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯುವಕ ನೀಡಿದ ದೂರಿನ ಮೇರೆಗೆ ಅಪರಾಧ ಕ್ರಮಾಂಕ 52/2026ರಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಎರಡೂ ಪ್ರಕರಣಗಳು ಪ್ರಸ್ತುತ ತನಿಖೆಯಲ್ಲಿದ್ದು, ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನುಳಿದ ಆರೋಪಿಗಳ ಪತ್ತೆ ಹಾಗೂ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೀತಿಸುವುದು ತಪ್ಪೇ!? ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ಆರೋಪ: ದಲಿತ ಸಂಘರ್ಷ ಸಮಿತಿ ಖಂಡನೆ
ಹಿಂದುಳಿದ ವರ್ಗಕ್ಕೆ ಸೇರಿದ ಯುವಕನೊಬ್ಬ ದಲಿತ ಯುವತಿಯನ್ನು ಪ್ರೀತಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಕುಂದಾಪುರ ತಾಲೂಕಿನ ಬೆಳ್ಳಾಲದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಮಲ್ಪೆಯಲ್ಲಿ ಮಹಿಳೆಯೊಬ್ಬರನ್ನು ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಾನೂನಿನ ಭಯವಿಲ್ಲದ ರೀತಿಯಲ್ಲಿ ವ್ಯಕ್ತಿಗಳ ಮೇಲೆ ಹಲ್ಲೆ ನಡೆಸುವ ಘಟನೆಗಳು ನಡೆಯುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಜಾತಿ, ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಬದುಕುವ ಮತ್ತು ಪ್ರೀತಿಸುವ ಹಕ್ಕಿದೆ. ಮಾನವೀಯತೆ ಹಾಗೂ ಕಾನೂನಿಗೆ ಗೌರವ ನೀಡುವುದು ಮುಖ್ಯವಾಗಿದ್ದು, ಹಿಂಸೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಂಘಟನೆ ತಿಳಿಸಿದೆ.
ಬೆಳ್ಳಾಲದಲ್ಲಿ ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರೆಂಬ ಕಾರಣಕ್ಕೆ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಆರೋಪ ಗಂಭೀರವಾಗಿದ್ದು, ಘಟನೆಯ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದೆ.
ಜಯನ್ ಮಲ್ಪೆ, ವಾಸುದೇವ ಮುದೂರು, ಪರಮೇಶ್ವರ ಉಪ್ಪೂರು, ಲಕ್ಷ್ಮಣ ಬೈಂದೂರು ಹಾಗೂ ಸ್ಥಳೀಯ ಗ್ರಾಮಸ್ಥರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.






