ಉಡುಪಿ ತಾಲೂಕಿನ ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ವಾರ್ಡ್‌ಗಳಲ್ಲಿ ವರ್ಷಗಳಿಂದ ಮುಂದುವರಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.

ಗ್ರಾಮಸ್ಥರು ಸಲ್ಲಿಸಿದ ಮನವಿಯಲ್ಲಿ, ಸಮರ್ಪಕ ಕುಡಿಯುವ ನೀರಿನ ಕೊರತೆ, ಗುಡ್ಡೇರಿ ಕೇರಿ ರಸ್ತೆ ದುರಸ್ಥಿಯ ಅಭಾವ, ನದಿ ತಡೆಗೋಡೆ ಹಾಗೂ ಸಂಪರ್ಕ ಸೌಲಭ್ಯಗಳ ಸಮಸ್ಯೆ, ವಿದ್ಯುತ್ ಕಡಿತದಂತಹ ಅನೇಕ ಸಮಸ್ಯೆಗಳು ಸಾರ್ವಜನಿಕರ ಬದುಕನ್ನು ಸಂಕಷ್ಟಕ್ಕೆ ದೂಡಿವೆ ಎಂದು ದೂರಿದ್ದಾರೆ.
ಈ ಸಮಸ್ಯೆಗಳ ಕುರಿತು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಇಂದಿನವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಇದರಿಂದ ಸಾರ್ವಜನಿಕರ ದೈನಂದಿನ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಆರೋಗ್ಯ ಮತ್ತು ಸುರಕ್ಷತೆಗೂ ಆತಂಕ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ವಿವಿಧ ವಾರ್ಡ್‌ಗಳ ನಿವಾಸಿಗಳು ಒಟ್ಟಾಗಿ ಮನವಿ ಸಲ್ಲಿಸಿ, ತಕ್ಷಣ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.
ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ತ್ವರಿತ ಹಾಗೂ ಸಕಾರಾತ್ಮಕ ಸ್ಪಂದನೆ ನೀಡಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಗ್ರಾಮಸ್ಥರು, ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಕೆಮ್ಮಣ್ಣು ಮಾಜಿ ಗ್ರಾಮ ಪಂಚಾಯತ್ ಸದಸ್ಯ ಹೈದರ್ ಅಲಿ ಅವರು, “ನಮ್ಮ ಹೂಡೆ ಪರಿಸರದಲ್ಲಿ ಕಳೆದ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಮುಂದುವರಿದಿದೆ. ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಮಾನ್ಯವಾಗಿ ನೀರಿನ ತೊಂದರೆ ಇಲ್ಲದಿದ್ದರೂ, ಹೂಡೆ ಪ್ರದೇಶದ ವಾರ್ಡ್ ಸಂಖ್ಯೆ 11, 12 ಮತ್ತು 13ರಲ್ಲಿ ತೀವ್ರ ನೀರಿನ ಸಮಸ್ಯೆ ಇದೆ. ಈ ಸಮಸ್ಯೆಗೆ ಇದುವರೆಗೆ ಸಮರ್ಪಕ ಪರಿಹಾರ ದೊರಕಿಲ್ಲ. ಆದ್ದರಿಂದ ಗ್ರಾಮಸ್ಥರೆಲ್ಲರೂ ಸೇರಿ ಇಂದು ಕೆಮ್ಮಣ್ಣು ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ಸಲ್ಲಿಸಿದ್ದೇವೆ” ಎಂದು ಹೇಳಿದರು.

“ನಮ್ಮ ಗುಡ್ಡೇರಿ ಕಂಬಳ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಸುಮಾರು ಮೂರು ವರ್ಷಗಳ ಹಿಂದೆ ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿದೆ. ಈ ಕುರಿತು ಸಣ್ಣ ನೀರಾವರಿ ಯೋಜನೆಯಡಿ ಎರಡು-ಮೂರು ಬಾರಿ ಅರ್ಜಿ ಸಲ್ಲಿಸಿದ್ದೇವೆ. ಪ್ರಕೃತಿ ವಿಕೋಪದಡಿಯಲ್ಲಿಯೂ ದೂರು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸುಮಾರು 20 ಮನೆಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದ್ದು, ರಸ್ತೆ ಸಂಪೂರ್ಣ ಕಟ್ ಆದರೆ ಸ್ಥಳೀಯರು ಭಾರೀ ತೊಂದರೆ ಅನುಭವಿಸಬೇಕಾಗುತ್ತದೆ” ಎಂದರು.

ಇನ್ನೂ ಗುಡ್ಡೇರಿ ಕಂಬಳ ಪ್ರದೇಶದಲ್ಲಿ ನಿರ್ಮಿಸಲಾದ ಸೇತುವೆ ಕುರಿತು ಮಾತನಾಡಿದ ಅವರು, “ಅಲ್ಲಿ ಪಿಲ್ಲರ್‌ಗಳ ಬದಲಿಗೆ ಪೈಪ್‌ಗಳನ್ನು ಅಳವಡಿಸಿ ಸೇತುವೆ ನಿರ್ಮಿಸಲಾಗಿದೆ. ಇದರಿಂದ ಸೇತುವೆ ಅಡಿಯಲ್ಲಿ ನೀರು ಸರಾಗವಾಗಿ ಹರಿಯದೆ ಕಸ-ಕಡ್ಡಿಗಳು ಜಮೆಯಾಗುತ್ತಿವೆ. ಪರಿಣಾಮ ಸುತ್ತಮುತ್ತಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ಇಂದಿನ ಮನವಿಯಲ್ಲಿ ಒತ್ತಾಯಿಸಿದ್ದೇವೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಟಿ ಎಂ ಜಫ್ರುಲ್ಲಾ, ಅಲ್ತಾಫ್, ಅಬ್ದುಲ್ ಅಹದ್, ಮೊಹಮ್ಮದ್ ಅಲ್ತಾಫ್, ಕೆ ಇಸ್ಮಾಯಿಲ್, ಸಮೀರ್, ಫಾರಿಸ್ ಅಹಮದ್ ಉಪಸ್ಥಿತರಿದ್ದರು.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.





