ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ಕೊಂಕಣ ರೈಲ್ವೆ ನಿಗಮ, ಕಳೆದ ಅಕ್ಟೋಬರ್ ತಿಂಗಳಿನಲ್ಲಿ 2.15 ಕೋಟಿ ರೂ. ದಂಡ ಹಾಗೂ ಟಿಕೆಟ್ ಶುಲ್ಕದ ರೂಪದಲ್ಲಿ ಸಂಗ್ರಹಿಸಿದೆ.
ಅಕ್ಟೋಬರ್ ತಿಂಗಳಿನಲ್ಲಿ ನಡೆಸಿದ 890 ವಿಶೇಷ ಟಿಕೆಟ್ ತಪಾಸಣಾ ಕಾರ್ಯಾಚರಣೆಗಳಲ್ಲಿ ಒಟ್ಟು 29,536 ಮಂದಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದೆ. ಇವರಿಂದ ದಂಡ ಮತ್ತು ಟಿಕೆಟ್ ಶುಲ್ಕ ಸೇರಿ 2.15 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
2026ರ ಏಪ್ರಿಲ್ 1ರಿಂದ ಅಕ್ಟೋಬರ್ 31ರವರೆಗೆ ಒಟ್ಟು 6,316 ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದ್ದು, 2,62,937 ಮಂದಿ ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದೆ. ಈ ಅವಧಿಯಲ್ಲಿ ಒಟ್ಟು 17.31 ಕೋಟಿ ರೂ. ಸಂಗ್ರಹಿಸಲಾಗಿದೆ.
ರೈಲ್ವೆ ಅಧಿಕಾರಿಗಳು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಹಕಾರದೊಂದಿಗೆ ರೈಲುಗಳು ಹಾಗೂ ನಿಲ್ದಾಣಗಳಲ್ಲಿ ಈ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೊಂಕಣ ರೈಲ್ವೆಯ ಎಲ್ಲ ಮಾರ್ಗಗಳಲ್ಲಿ ಟಿಕೆಟ್ ತಪಾಸಣೆ ಮುಂದುವರಿಯಲಿದೆ.
ಪ್ರಯಾಣಿಕರು ಅಧಿಕೃತ ಟಿಕೆಟ್ ಖರೀದಿಸಿ ಪ್ರಯಾಣಿಸುವ ಮೂಲಕ ದಂಡದ ಕ್ರಮ ಹಾಗೂ ಅನಗತ್ಯ ತೊಂದರೆಗಳನ್ನು ತಪ್ಪಿಸಿಕೊಳ್ಳುವಂತೆ ಕೊಂಕಣ ರೈಲ್ವೆ ಮನವಿ ಮಾಡಿದೆ.







