ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವ ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ನಿರಂತರವಾಗಿ ದೊರಕುವಂತೆ ನೋಡಿಕೊಳ್ಳಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರವು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ರೆಫರ್ ಆದ ರೋಗಿಗಳಿಗೆ ಚಿಕಿತ್ಸಾ ನೆರವು ಸರಿಯಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಬರುತ್ತಿರುವುದಾಗಿ ತಿಳಿಸಿದ ಅವರು, ಕೋ-ಆರ್ಡಿನೇಟರ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ರೋಗಿಗಳಿಗೆ ನೆರವಾಗಬೇಕು ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆಯಿಂದ ರೆಫರ್ ಮಾಡಿದ ರೋಗಿಗಳಿಗೆ ಮಣಿಪಾಲದ ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದ್ದು, ಈ ಕುರಿತು ರಾಜ್ಯ ನಿರ್ದೇಶಕರಿಗೆ ಪತ್ರ ಬರೆಯುವಂತೆ ಸೂಚಿಸಿದರು. ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಸಭೆಯನ್ನು ಒಂದು ವಾರದೊಳಗೆ ನಡೆಸುವಂತೆ ನಿರ್ದೇಶನ ನೀಡಿದರು.
ಬ್ರಹ್ಮಾವರ ತಾಲೂಕಿನಲ್ಲಿ ಇಎಸ್‌ಐ ಆಸ್ಪತ್ರೆಗೆ ಮಂಜೂರಾದ 2.5 ಕೋಟಿ ರೂ. ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಲಾಭ ತಲುಪಿಸಬೇಕು ಎಂದು ಸೂಚಿಸಿದ ಅವರು, ಪ್ರಗತಿ ವಿವರ ನೀಡಲು ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಕಾರಣ ಕೇಳಿ ನೋಟಿಸ್ ನೀಡುವಂತೆ ಹೇಳಿದರು.
ಕೊಂಕಣ ರೈಲ್ವೆಗೆ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ರೈಲುಗಳಿಗೆ ನೀರು ಒದಗಿಸಲು ಸೂಕ್ತ ಮೂಲಗಳನ್ನು ಗುರುತಿಸಿ ಜಿಲ್ಲಾ ಪಂಚಾಯತ್‌ನ ತಾಂತ್ರಿಕ ಸಲಹೆಯೊಂದಿಗೆ ಕಾರ್ಯಗತಗೊಳಿಸಬೇಕು ಎಂದು ತಿಳಿಸಿದರು.
ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ಹಾಗೂ ಮಳೆಗಾಲದಲ್ಲಿ ಉಂಟಾಗುವ ತೊಂದರೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು. ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರಗೊಳಿಸಿ ಬದಲಿ ರಸ್ತೆ ವ್ಯವಸ್ಥೆಯನ್ನೂ ಒದಗಿಸಬೇಕು ಎಂದರು.
ಗ್ರಾಮೀಣ ಭಾಗಗಳಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಉಳಿದ ಟವರ್‌ಗಳನ್ನು 4Gಗೆ ಉನ್ನತೀಕರಿಸಿ ವಿದ್ಯುತ್ ವ್ಯತ್ಯಯದ ಸಂದರ್ಭದಲ್ಲೂ ಸೇವೆ ಲಭ್ಯವಾಗುವಂತೆ ಬ್ಯಾಟರಿ ಅಳವಡಿಕೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಮನೆ ಮನೆಗೆ ಎಲ್‌ಪಿಜಿ ಗ್ಯಾಸ್ ಸಂಪರ್ಕ ಒದಗಿಸುವ ಪೈಪ್‌ಲೈನ್ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ಜೂನ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಆದೇಶಿಸಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಅನುಮೋದನೆ ಪಡೆದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೂ ಆದ್ಯತೆ ನೀಡಬೇಕು ಎಂದರು.
ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳ ಪ್ರಗತಿಯನ್ನು ಹೆಚ್ಚಿಸುವಂತೆ ಸೂಚಿಸಿದ ಅವರು, ಜಲ್ ಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ನೀರು ಸರಬರಾಜು ನಿರಂತರವಾಗುವಂತೆ ಮೂಲಗಳನ್ನು ಗುರುತಿಸಲು ಹೇಳಿದರು.
ಘನತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವಿಕೆ ತಡೆಗಟ್ಟಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರನ್ನು ಅಭಿನಂದಿಸಿದರು.
ಸಭೆಯಲ್ಲಿ ಶಾಸಕರು ಯಶ್‌ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.






