ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾಲೂಕು ಆಡಳಿತ ಕುಂದಾಪುರ ಹಾಗೂ ಪ್ರಜಾಸೇವೆ ಇಲಾಖೆಯ ವತಿಯಿಂದ ಆಯೋಜಿಸಲಾದ ಪ್ರಜಾಸೇವೆ ಆಂದೋಲನ ಸಭೆಯನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಜಾಸೇವೆ ಆಂದೋಲನದ ಮೂಲಕ ಇದುವರೆಗೆ ಸುಮಾರು 431 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಆದರೆ, ಅರ್ಜಿಗಳ ವಿಲೇವಾರಿಗಿಂತಲೂ ಅವುಗಳಲ್ಲಿ ಎಷ್ಟು ಜನರ ಸಮಸ್ಯೆಗಳಿಗೆ ನೈಜವಾಗಿ ಪರಿಹಾರ ದೊರೆತಿದೆ ಎನ್ನುವುದು ಮುಖ್ಯವಾಗಿದೆ ಎಂದರು.
ಇಡೀ ಜಿಲ್ಲಾಡಳಿತವೇ ಗ್ರಾಮಕ್ಕೆ ಆಗಮಿಸಿರುವುದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಮುಂದೆ ಹೇಳಿಕೊಳ್ಳಬೇಕು. ಇದರಿಂದ ಸಮಸ್ಯೆಗಳಿಗೆ ಯಾವುದಾದರೂ ರೂಪದಲ್ಲಿ ಪರಿಹಾರ ದೊರೆಯುವ ನಿರೀಕ್ಷೆಯಿದೆ. ಪ್ರತಿಯೊಂದು ಸಮಸ್ಯೆಯನ್ನೂ ತಕ್ಷಣವೇ ಬಗೆಹರಿಸಲು ಸಾಧ್ಯವಾಗದಿದ್ದರೂ, ಸ್ಥಳದಲ್ಲಿಯೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬಹುದು. ಉಳಿದ ಸಮಸ್ಯೆಗಳ ಪರಿಹಾರಕ್ಕೂ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸೋಣ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ, ಪ್ರಜಾಸೇವೆ ಆಂದೋಲನದ ಮೂಲಕ ತಾಲೂಕು ಆಡಳಿತವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ಕಲ್ಪಿಸುವ ಕಾರ್ಯಕ್ಕೆ ಮುಂದಾಗಿದೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಸಾರ್ವಜನಿಕರು ಒಂದೇ ಸ್ಥಳದಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಿದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಮೀಣ ಪ್ರದೇಶಗಳಿಂದ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸರ್ಕಾರವೇ ಜನರ ಮನೆಬಾಗಿಲಿಗೆ ಬಂದು ಸಮಸ್ಯೆಗಳನ್ನು ಆಲಿಸುತ್ತಿದ್ದು, ಸಾರ್ವಜನಿಕರು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತ ಮಹೇಶ್ ಎನ್., ಎಎಸ್ಪಿ ಸುಧಾಕರ್ ನಾಯ್ಕ, ಆಡಳಿತಾಧಿಕಾರಿ ಮಹಾಬಲ ನಾಯ್ಕ, ಕುಂದಾಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಸೋಮನಾಥ ವಿಭೂತಿ, ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ. ಶಂಕರ್, ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಸ್ವಾಗತಿಸಿದರು. ಡೆಪ್ಯೂಟಿ ತಹಶೀಲ್ದಾರ್ ವಿನಯ್ ನಿರೂಪಿಸಿ ವಂದಿಸಿದರು.
ಸಭೆಯಲ್ಲಿ ಸಾರ್ವಜನಿಕರಿಂದ 103ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು.






