ಉಡುಪಿಯ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.
ಪೊಲೀಸ್ ಕಸ್ಟಡಿ ಅವಧಿಯಲ್ಲಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ಹೆಚ್ಚಿನ ಮಾಹಿತಿ ಕಲೆಹಾಕಲು ಹಾಗೂ ಪ್ರಕರಣದ ಇತರ ಆಯಾಮಗಳ ಕುರಿತು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.






