ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೋಟತಟ್ಟು ಗ್ರಾಮದ ಗೊಬ್ಬರಬೆಟ್ಟು ನಿವಾಸಿ ನಾಗೇಂದ್ರ ಪುತ್ರನ್ (37), ಪಾರಂಪಳ್ಳಿ ಗ್ರಾಮದ ಪಡುಕೆರೆಯ ಪಿ. ಸುಮಂತ್ ಕುಂದರ್ (40) ಹಾಗೂ ಸಾಸ್ತಾನದ ಸಚಿನ್ ಶ್ರೀಯಾನ್ (32) ಎಂದು ಗುರುತಿಸಲಾಗಿದೆ.
ಆ.31ರಂದು ಅನ್ನಭಾಗ್ಯದ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವ ವಿಚಾರದಲ್ಲಿ ಆರೋಪಿಗಳು ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಹಾಗೂ ಸುಲಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದರು. ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರವೀಣ ಕುಮಾರ್ ಆರ್. ಹಾಗೂ ಮಹಾಂತೇಶ ಜಾಬಗೌಡ ನೇತೃತ್ವದಲ್ಲಿ ಸಿಬ್ಬಂದಿಗಳಾದ ವಿಜಯೇಂದ್ರ, ಶರತ್ ಮತ್ತು ಶಿವರಾಜ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ನಾಗೇಂದ್ರ ಪುತ್ರನ್ ಹಾಗೂ ಪಿ. ಸುಮಂತ್ ಕುಂದರ್ ಅವರನ್ನು ಸೆ.2ರಂದು ಮೈಸೂರು ಜಿಲ್ಲೆಯ ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮತ್ತೋರ್ವ ಆರೋಪಿ ಸಚಿನ್ ಶ್ರೀಯಾನ್ನನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






