ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುವ ಪ್ರಬಲ ಸಾಧನವಾಗಿದ್ದು, ಗುಣಮಟ್ಟದ ಶಿಕ್ಷಣವು ಮಕ್ಕಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುತ್ತದೆ. ಅಲ್ಪಸಂಖ್ಯಾತ ಸಮುದಾಯದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಸೂಚಿಸಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣವಿಲ್ಲದೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಮುಸ್ಲಿಂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಹಾಗೂ ಪಾರ್ಸಿ ಸಮುದಾಯಗಳ ಮಕ್ಕಳು ಶಿಕ್ಷಣದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು. ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲೆಯ 1,522 ಅಂಗನವಾಡಿಗಳ ಪೈಕಿ 155 ಅಂಗನವಾಡಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿವೆ. ಅಂಗನವಾಡಿಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಲ್ಪಸಂಖ್ಯಾತರನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ತಲುಪಿಸುವ ಕಾರ್ಯ ಸಮರ್ಪಕವಾಗಿ ನಡೆಯುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕು. ವಿದೇಶಗಳಲ್ಲಿ ಉದ್ಯೋಗ ಪಡೆಯಲು ನೆರವಾಗುವ ಓವರ್‌ಸೀಸ್ ಎಂಪ್ಲಾಯ್‌ಮೆಂಟ್ ಸೆಲ್‌ನ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಸೂಚಿಸಿದರು.
ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು. ಅಲ್ಪಸಂಖ್ಯಾತ ಕಟ್ಟಡ ಕಾರ್ಮಿಕರಿಗೆ ಶಿಬಿರಗಳ ಮೂಲಕ ಕಾರ್ಮಿಕ ಗುರುತಿನ ಚೀಟಿ ವಿತರಿಸಬೇಕು. ನೋಂದಾಯಿತ ಕಾರ್ಮಿಕರಿಗೆ ಟೂಲ್‌ಕಿಟ್‌ಗಳನ್ನು ವಿತರಿಸುವ ಮೂಲಕ ಸರಕಾರಿ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯ 15 ವಿಶೇಷ ಚೇತನರ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು. ವಿಶೇಷ ಚೇತನರಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳಿಗೆ ಸೂಕ್ತ ವೇದಿಕೆ ಕಲ್ಪಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 5,500 ಬೀದಿ ಬದಿ ವ್ಯಾಪಾರಿಗಳು ನೋಂದಾಯಿಸಿಕೊಂಡಿದ್ದು, ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಯೋಜನೆಯಡಿ ಅರ್ಹ ವ್ಯಾಪಾರಿಗಳಿಗೆ ಹಂತ ಹಂತವಾಗಿ ₹10,000, ₹25,000 ಹಾಗೂ ₹50,000 ಸಾಲ ಸೌಲಭ್ಯ ಪಡೆಯಲು ನೆರವಾಗಬೇಕು ಎಂದು ಹೇಳಿದರು.

ಕೃಷಿ ಇಲಾಖೆಯಡಿ ಅಲ್ಪಸಂಖ್ಯಾತರಿಗಾಗಿ ಒಂಬತ್ತು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, 5,804 ಮಂದಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಲ್ಲಿ 3,339 ಮಂದಿ ಕೃಷಿ ಭೂಮಿ ಹೊಂದಿದ್ದಾರೆ. ಈ ಪೈಕಿ 409 ಮಂದಿ ಕೃಷಿ ಯೋಜನೆಗಳ ಸೌಲಭ್ಯ ಪಡೆದಿದ್ದಾರೆ. ಫಲಾನುಭವಿಗಳ ವಿವರ ಸಂಗ್ರಹಿಸಿ, ಇನ್ನಷ್ಟು ಜನರಿಗೆ ಯೋಜನೆಗಳ ಪ್ರಯೋಜನ ತಲುಪಿಸಬೇಕು. ತೋಟಗಾರಿಕೆ ಇಲಾಖೆಯಡಿ ನಿಗದಿಪಡಿಸಿದ 151 ಗುರಿಗಳ ಪೈಕಿ 142 ಗುರಿಗಳನ್ನು ಸಾಧಿಸಲಾಗಿದ್ದು, ಹೆಚ್ಚಿನ ಫಲಾನುಭವಿಗಳನ್ನು ಯೋಜನೆಗಳ ವ್ಯಾಪ್ತಿಗೆ ತರಬೇಕು ಎಂದರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 8,563 ಫಲಾನುಭವಿಗಳು ವಿವಿಧ ಚಟುವಟಿಕೆಗಳಿಗಾಗಿ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆದಿದ್ದಾರೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಲಭ್ಯವಿರುವ ಶೈಕ್ಷಣಿಕ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಮತೀಯ ಭಾವನೆ ಕೆರಳಿಸುವ ಸಂದೇಶಗಳ ಬಗ್ಗೆ ನಿಗಾ ವಹಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಈ ಸಂಬಂಧದ ಪ್ರಕರಣಗಳ ಸಂಪೂರ್ಣ ವಿವರಗಳನ್ನು ಒದಗಿಸುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸಂಪೂರ್ಣ ಪ್ರಯೋಜನ ಅರ್ಹ ಸಮುದಾಯದ ಜನರಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನಿಸಾರ್ ಅಹ್ಮದ್ ಹೇಳಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, 14 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯ ಶಿಕ್ಷಣ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಎಎಸ್ಪಿ ಸುಧಾಕರ ನಾಯಕ್, ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಜಿನೇಂದ್ರ ಎಂ., ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನದ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







