ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ ಹಾಗೂ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸುವ ಉದ್ದೇಶದಿಂದ ನ.24ರಂದು ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಹಿತಿ ಕಾರ್ಯಾಗಾರ ಹಾಗೂ ಫಲಾನುಭವಿಗಳ ಸಂಭ್ರಮೋತ್ಸವ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಲಕ್ಷಾಂತರ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ. ಜಿಲ್ಲೆಯ ಫಲಾನುಭವಿಗಳನ್ನು ಒಂದೆಡೆ ಸೇರಿಸಿ, ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮವನ್ನು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು.
ಖ್ಯಾತ ಚಿಂತಕ ಹಾಗೂ ಪತ್ರಕರ್ತ ಡಾ. ವಾಸು ಮತ್ತು ವಿಧಾನ ಪರಿಷತ್ ಉಪಸಭಾಪತಿ, ಮಾಜಿ ಸಚಿವೆ ಡಾ. ಉಮಾಶ್ರೀ ಅವರು ಗ್ಯಾರಂಟಿ ಯೋಜನೆಗಳ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ನಗರದ ಕೆಎಂ ಮಾರ್ಗದಲ್ಲಿರುವ ಮದರ್ ಆಫ್ ಸಾರೋಸ್ ಚರ್ಚ್ ಆವರಣದಿಂದ ಅತಿಥಿಗಳು ಹಾಗೂ ಇತರರು ಟ್ಯಾಬ್ಲೋ ಸಹಿತ ಮೆರವಣಿಗೆಯಲ್ಲಿ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪಂಚ ಗ್ಯಾರಂಟಿ ಯೋಜನೆಗಳ ನಿಯಮಾವಳಿ, ಅರ್ಹತಾ ಮಾನದಂಡ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹಾಗೂ ತಾಂತ್ರಿಕ ಸಮಸ್ಯೆಗಳ ಪರಿಹಾರದ ಕುರಿತು ಸಾರ್ವಜನಿಕರು ಮತ್ತು ಗ್ರಾಮಮಟ್ಟದ ಪ್ರತಿನಿಧಿಗಳಿಗೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುವುದು.
ಸಮಾವೇಶದಲ್ಲಿ 7ರಿಂದ 8 ಸಾವಿರ ಫಲಾನುಭವಿಗಳು ಸೇರಿದಂತೆ ಸುಮಾರು 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಫಲಾನುಭವಿಗಳೊಂದಿಗೆ ಸಂವಾದ ನಡೆಸುವುದರ ಜತೆಗೆ, ಗ್ಯಾರಂಟಿ ಯೋಜನೆಗಳ ನೆರವಿನಿಂದ ಸ್ವಾವಲಂಬಿ ಬದುಕು ಕಟ್ಟಿಕೊಂಡವರ ಅನುಭವಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ವಿವಿಧ ಇಲಾಖೆಗಳ ವತಿಯಿಂದ ಯೋಜನೆಗಳ ಮಾಹಿತಿ ನೀಡುವ ಮಳಿಗೆಗಳನ್ನೂ ತೆರೆಯಲಾಗುವುದು ಎಂದು ಅಶೋಕಕುಮಾರ್ ಕೊಡವೂರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ಸತೀಶ್ ಜಪ್ತಿ, ಉಡುಪಿ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ತಾಲೂಕು ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಹಾಗೂ ಹೆಬ್ರಿ ಸಮಿತಿ ಅಧ್ಯಕ್ಷ ಶಂಕರ ದೇವಾಡಿಗ ಉಪಸ್ಥಿತರಿದ್ದರು.







