ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ, ನಿಯಮಾನುಸಾರ ತ್ವರಿತವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಸಾಮಾನ್ಯರ ಸಮಸ್ಯೆಗಳನ್ನು ಅವರಿರುವ ಸ್ಥಳದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನದಲ್ಲಿ ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳನ್ನು ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ, ಅನಗತ್ಯ ವಿಳಂಬವಿಲ್ಲದೆ ಪ್ರಾಮಾಣಿಕವಾಗಿ ಪರಿಹರಿಸಬೇಕು. ಕೈಗೊಂಡ ಕ್ರಮಗಳ ಕುರಿತು ಅರ್ಜಿದಾರರಿಗೆ ಹಿಂಬರಹ ನೀಡಬೇಕು ಎಂದು ಸೂಚಿಸಿದರು.

ಸಾರ್ವಜನಿಕರಿಂದ ಅಹವಾಲುಗಳು ಸ್ವೀಕೃತವಾದಾಗ ಅವು ಯಾವ ಇಲಾಖೆಯ ವ್ಯಾಪ್ತಿಗೆ ಬರುತ್ತವೆ ಎಂಬುದನ್ನು ಗುರುತಿಸಿ, ತಕ್ಷಣ ವಿಲೇವಾರಿಗೆ ಕ್ರಮಕೈಗೊಳ್ಳಬೇಕು. ಅರ್ಜಿಗಳು ತಮ್ಮ ಇಲಾಖೆಯ ವ್ಯಾಪ್ತಿಗೆ ಸೇರದಿದ್ದಲ್ಲಿ ಅಥವಾ ಬೇರೆ ತಾಲೂಕಿಗೆ ಸಂಬಂಧಿಸಿದ್ದಲ್ಲಿ ವಿಳಂಬ ಮಾಡದೆ ಸಂಬಂಧಪಟ್ಟ ಇಲಾಖೆ ಅಥವಾ ತಾಲೂಕಿಗೆ ವರ್ಗಾಯಿಸಬೇಕು. ಈ ಪ್ರಕ್ರಿಯೆಯನ್ನು ಸಭೆಯಲ್ಲಿಯೇ ನಿರ್ಧರಿಸುವುದು ಸೂಕ್ತ ಎಂದರು.
ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸಬಹುದಾದ ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಪರಿಹಾರ ಒದಗಿಸಬೇಕು. ಅರ್ಜಿಗಳ ವಿಲೇವಾರಿ ವಿವರಗಳನ್ನು ಐ.ಪಿ.ಜಿ.ಆರ್.ಎಸ್. ಪೋರ್ಟಲ್‌ನಲ್ಲಿ ದಾಖಲಿಸಬೇಕು. ನಿಯಮಾನುಸಾರ ಪರಿಹರಿಸಲು ಸಾಧ್ಯವಾಗದ ಅರ್ಜಿಗಳಿಗೆ ಸಮರ್ಪಕ ಹಾಗೂ ಸಕಾರಾತ್ಮಕ ಉತ್ತರ ನೀಡಬೇಕು. ಅಸಂಬದ್ಧ ಉತ್ತರಗಳನ್ನು ನೀಡುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಸಾರ್ವಜನಿಕರು ಒಂದೇ ಅರ್ಜಿಯಲ್ಲಿ ಹಲವು ಸಮಸ್ಯೆಗಳನ್ನು ನಮೂದಿಸಿ ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಅರ್ಜಿಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ಪ್ರತಿಯೊಂದು ಸಮಸ್ಯೆಗೂ ಪ್ರತ್ಯೇಕ ಅರ್ಜಿಗಳನ್ನು ಪಡೆದು, ಸಂಬಂಧಪಟ್ಟ ಇಲಾಖೆಗಳಿಗೆ ಸಲ್ಲಿಸುವ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಹಾಯಕ ಆಯುಕ್ತ ಮಹೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.







