ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.
SDPI ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಧರಣಿಯಲ್ಲಿ, SDPI ಕರ್ನಾಟಕ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಆದಿಉಡುಪಿ ಮಸೀದಿಯ ಮೌಲಾನ ಮೊಹಮ್ಮದ್ ಆದಿಲ್ ಖಾಸಿಮಿ, SDPI ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, SDTU ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, SDTU ರಾಜ್ಯ ಸಮಿತಿ ಸದಸ್ಯ ಹನೀಫ್ ಮೂಳೂರು, ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹಾಗೂ ಎದ್ದೇಳು ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ವೀರ್ ಸಂಗ್ಯಾ, ಕ್ರೈಸ್ತ ಧರ್ಮಗುರು ಫಾದರ್ ವಿಲಿಯಮ್ ಮಾರ್ಟಿಸ್, ಯಂಗ್ ಡೆಮಾಕ್ರಟ್ಸ್ ರಾಜ್ಯ ಸಂಘಟನಾ ಸಮಿತಿ ಸದಸ್ಯ ಜಯಕುಮಾರ್ ಹಾದಿಗೆ, SDPI ರಾಜ್ಯ ಸಮಿತಿ ಸದಸ್ಯ ಶಾಹಿದ್ ಆಲಿ ಹಾಗೂ SDPI ಉಡುಪಿ ಜಿಲ್ಲಾ ಕಾರ್ಯದರ್ಶಿ ನಸೀಮ್ ಫಾತಿಮಾ ಸೇರಿದಂತೆ ಹಲವು ನಾಯಕರು SIR ಪ್ರಕ್ರಿಯೆಯ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

SIR ಪ್ರಕ್ರಿಯೆಯಿಂದ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕವಿದೆ. ಈ ಪ್ರಕ್ರಿಯೆಯು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತದಾರರ ಹಕ್ಕುಗಳನ್ನು ಸಂರಕ್ಷಿಸುವ ಬದಲು ಅವುಗಳಿಗೆ ಅಡ್ಡಿಯಾಗುವಂತಹ ಕ್ರಮಗಳನ್ನು ಕೈಗೊಳ್ಳುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.
ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಯ ದೃಷ್ಟಿಯಿಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು SIR ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಲ್ಲದೆ, ಮತದಾರರ ಹಕ್ಕುಗಳ ರಕ್ಷಣೆಗಾಗಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಅಗತ್ಯವಿದೆ ಎಂದು ನಾಯಕರು ಕರೆ ನೀಡಿದರು.
SDPI ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಸುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನೌಶಿನ್ ಹಸ್ರತ್, ರಾಜ್ಯ ಕಾರ್ಯದರ್ಶಿ ನಾಜಿಯಾ ನಸ್ರುಲ್ಲ, ರಾಜ್ಯ ಸಮಿತಿ ಸದಸ್ಯೆ ಜೋಹರಾ ರಝಾಕ್ ಹಾಗೂ ಉಪಾಧ್ಯಕ್ಷೆ ಫಾತಿಮಾ ನಸೀಮಾ ಸೇರಿದಂತೆ ಪಕ್ಷದ ವಿವಿಧ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಪ್ರತಿಭಟನಾ ಧರಣಿಯಲ್ಲಿ ಹೋರಾಟದ ಹಾಡುಗಳು, ಘೋಷಣೆಗಳು ಹಾಗೂ ನಾಯಕರ ಭಾಷಣಗಳ ಮೂಲಕ SIR ಪ್ರಕ್ರಿಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಧರಣಿಗೆ ಬೆಂಬಲ ಸೂಚಿಸಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.







