ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ ನೂರಾರು ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಮೂಲಕ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮುಖಂಡರು ಮನವಿ ಸಲ್ಲಿಸಿದರು.
ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಬಾಲಜಿ ಯೋಗಿಶ್ ವಿ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಶ್ರೀಕಾಂತ್ ಪೂಜಾರಿ ಕುಚ್ಚೂರು ಅವರು ಮನವಿ ಸಲ್ಲಿಸಿ, ಈ ಭಾಗದ ಬಡ ಕೃಷಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.
ಶಿವಪುರ ಮತ್ತು ಕೆರೆಬಿಟ್ಟು ಗ್ರಾಮದ ನಿವಾಸಿಗಳು ಅನಾದಿಕಾಲದಿಂದಲೂ ತಮ್ಮ ಪೂರ್ವಜರ ಭೂಮಿಯಲ್ಲಿ ವಾಸಿಸುತ್ತಿದ್ದು, ಕೃಷಿ ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಕೃಷಿ ಪರಂಪರೆಯೊಂದಿಗೆ ನಾಗಾರಾಧನೆ, ದೈವಾರಾಧನೆ ಸೇರಿದಂತೆ ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳನ್ನು ತಲೆತಲಾಂತರಗಳಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ.
ಆದರೆ, ಇದೀಗ ನೂರಾರು ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿರುವುದು ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಭೂಸ್ವಾಧೀನದಿಂದ ಅನೇಕ ಕುಟುಂಬಗಳು ತಮ್ಮ ಮನೆ, ಕೃಷಿ ಭೂಮಿ ಹಾಗೂ ಜೀವನೋಪಾಯ ಕಳೆದುಕೊಳ್ಳುವ ಭೀತಿ ಎದುರಿಸುತ್ತಿವೆ. ಅಲ್ಲದೆ, ನಾಗಬನ, ನಾಗದೇವರ ಆರಾಧನಾ ಸ್ಥಳಗಳು ಹಾಗೂ ದೈವ-ದೇವರುಗಳ ಧಾರ್ಮಿಕ ಕೇಂದ್ರಗಳಿಗೂ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈಗಾಗಲೇ ಹೆಬ್ರಿ ತಾಲ್ಲೂಕಿನ ಕಸಬು ಪ್ರದೇಶದಲ್ಲಿ ರಂಗನ ಪರದೈವದ ವಿಚಾರವಾಗಿ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದು, ಇದೀಗ ಮತ್ತೊಂದು ಭೂಸ್ವಾಧೀನ ಪ್ರಕ್ರಿಯೆ ಸ್ಥಳೀಯರ ಸಂಕಷ್ಟವನ್ನು ಹೆಚ್ಚಿಸಲಿದೆ. ಅಭಿವೃದ್ಧಿಯ ಹೆಸರಿನಲ್ಲಿ ಬಡ ರೈತರ ಬದುಕು ಹಾಗೂ ಧಾರ್ಮಿಕ, ಸಾಂಸ್ಕೃತಿಕ ಪರಂಪರೆಗೆ ಹಾನಿಯಾಗಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಕ್ಷಣ ಮಧ್ಯಪ್ರವೇಶಿಸಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ, ಶಿವಪುರ ಮತ್ತು ಕೆರೆಬಿಟ್ಟು ಗ್ರಾಮದ ಕೃಷಿ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕೃಷಿಕರ ಬದುಕು, ಭೂಮಿ ಹಾಗೂ ಪರಂಪರೆಯನ್ನು ಉಳಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಜೆಡಿಎಸ್ ಮುಖಂಡರು ಮನವಿ ಮಾಡಿದ್ದಾರೆ.






