ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ, ಕಾಲೇಜಿನ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಗತ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇನ್ನೂ ಎರಡು ಮಹಿಳಾ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಮೂರು ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸಂಪುಟವು ₹32,000 ಕೋಟಿ ಅನುದಾನ ಮಂಜೂರು ಮಾಡಿದೆ. ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಶಿವರಾಜ ತಂಗಡಗಿ ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿಕೇತನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಪ್ರಾಧ್ಯಾಪಕರಾದ ಪ್ರೊ. ಪಿ.ಬಿ. ಪ್ರಸನ್ನ, ವಿದ್ಯಾ ಡಿ., ಡಾ. ಮಣಿಭೂಷಣ್ ಡಿಸೋಜ, ಜಯಲಿಂಗ ಮೂರ್ತಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.






