ಡಾ. ಶಿವರಾಮ ಕಾರಂತರು ತಮ್ಮ ಸಾಹಿತ್ಯ ಮತ್ತು ಕೃತಿಗಳ ಮೂಲಕ ಕರಾವಳಿಯ ಪರಿಸರದ ಮಹತ್ವವನ್ನು ಸಾರಿದ್ದು, ಪರಿಸರದ ಕುರಿತಾದ ಅವರ ಕಾಳಜಿ ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್, ‘ನಮ್ಮ ಮನೆ ನಮ್ಮ ಮರ’ ಅಭಿಯಾನ ತಂಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಭಾಗಿತ್ವದಲ್ಲಿ ಅಲೆವೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಕಾರಂತರ ನೆನಪಿನಲ್ಲಿ ಪರಿಸರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಬೆಳೆಸುವ ಮಹತ್ವದ ಕಾರ್ಯವನ್ನು ಕಾರಂತರು ನಡೆಸಿದ್ದು, ಅವರ ನೆನಪಿನಲ್ಲಿ ಪರಿಸರ ದಿನಾಚರಣೆ ಆಚರಿಸುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ಮಾತನಾಡಿ, ಪರಿಸರವು ಮಾನವ ಬದುಕಿನ ಜೀವದಾತುವಾಗಿದ್ದು, ಅದರ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಂಡರೆ ಪರಿಸರ ಸಂರಕ್ಷಣೆ ಸುಲಭವಾಗುತ್ತದೆ ಎಂದರು.
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವಿರಾಜ್ ಎಚ್.ಪಿ ಪ್ರಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಜನಾರ್ಧನ ಕೊಡವೂರು, ರಂಜಿನಿ ವಸಂತ್, ಸದಸ್ಯೆ ದೀಪಾ ಕರ್ಕಿ, ಡಾ. ರಶ್ಮಿ ಅಮ್ಮೆಂಬಳ, ಜ್ಯೋತಿ ಶೆಟ್, ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಸದಸ್ಯ ಸತೀಶ್ ಕೊಡವೂರು, ಕೆ.ಆರ್. ತಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.






