ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಹೇಳಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಗುರುವಾರ ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲೆಯ ಕಾರ್ಮಿಕ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ವಿವಿಧ ವಲಯಗಳಲ್ಲಿ ಸುಮಾರು 3.5 ಕೋಟಿ ಕಾರ್ಮಿಕರಿದ್ದು, ಅವರ ಹಿತಾಸಕ್ತಿ ಕಾಪಾಡುವಲ್ಲಿ ಸರ್ಕಾರ ವಿಶೇಷ ಕಾಳಜಿ ವಹಿಸಿದೆ. ಕಾರ್ಮಿಕರು ರಾಜ್ಯದ ಯಾವುದೇ ಭಾಗದವರಾಗಿದ್ದರೂ, ಅವರು ನಿರ್ವಹಿಸುವ ಕೆಲಸಕ್ಕೆ ನಿಗದಿತ ಕನಿಷ್ಠ ವೇತನ ದೊರೆಯುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಈ ಕಾರ್ಯವನ್ನು ಯಾವುದೇ ಮುಲಾಜಿಲ್ಲದೆ ಮಾನವೀಯ ದೃಷ್ಟಿಕೋನದಿಂದ ನಿರ್ವಹಿಸಬೇಕು ಎಂದು ಸೂಚಿಸಿದರು.
ಜೀವನಶೈಲಿಯ ಬದಲಾವಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪರಿಗಣಿಸಿ, ಸರ್ಕಾರವು ಒಂಬತ್ತು ವರ್ಷಗಳ ಬಳಿಕ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ಕ್ರಮ ಕೈಗೊಂಡಿದೆ. ವಿವಿಧ ಹಂತಗಳಲ್ಲಿ ಕನಿಷ್ಠ ವೇತನ ನಿಗದಿಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಕೆಲವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲೇ ಸೂಕ್ತ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಕಾರ್ಮಿಕ ಸಂಘಟನೆಗಳು ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ನೋಂದಾಯಿಸುವ ಮೂಲಕ ಸರ್ಕಾರದ ವಿವಿಧ ಸೌಲಭ್ಯಗಳನ್ನು ಅವರಿಗೆ ತಲುಪಿಸಬೇಕು ಎಂದು ಕರೆ ನೀಡಿದರು.
ಅಸಂಘಟಿತ ಕಾರ್ಮಿಕರ ರಕ್ಷಣೆಗೆ ಆದ್ಯತೆ ನೀಡಿ
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಅಸಂಘಟಿತ ಕಾರ್ಮಿಕರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ದುಡಿಯುವ ವರ್ಗದ ಹಿತಾಸಕ್ತಿ ಕಾಪಾಡುವುದರೊಂದಿಗೆ ಅವರು ಸಮಾಜದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಅಗತ್ಯ ಅವಕಾಶಗಳನ್ನು ಕಲ್ಪಿಸಬೇಕು ಎಂದರು.
ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕನಿಷ್ಠ ವೇತನದ ಜೊತೆಗೆ ಸಾಮಾಜಿಕ ಭದ್ರತಾ ಸೌಲಭ್ಯಗಳೂ ದೊರೆಯುವಂತಾಗಬೇಕು. ಕಾರ್ಮಿಕರ ಕಲ್ಯಾಣದಿಂದ ಸಮಾಜದ ಕಲ್ಯಾಣ ಸಾಧ್ಯವಾಗುತ್ತದೆ. ಕಾರ್ಮಿಕರ ಜೀವನಮಟ್ಟ ಸುಧಾರಣೆಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಂಘಟನೆಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಟ್ಟಡ ಕಾರ್ಮಿಕರು ವರ್ಷದಲ್ಲಿ 90 ದಿನಗಳ ಕಾಲ ಕೆಲಸ ನಿರ್ವಹಿಸಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡ ಬಳಿಕ, ಇತರ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅವರ ನೋಂದಣಿಯನ್ನು ರದ್ದುಗೊಳಿಸಬಾರದು ಎಂದು ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕಾರ್ಮಿಕ ನಿರೀಕ್ಷಕರಾದ ಸಂಜಯ್ ಮತ್ತು ಮಲ್ಲಿಕ್ ಪ್ರಸಾದ್, ಉಡುಪಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್ ವಿ., ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





