ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಪ್ರತಿಯೊಬ್ಬರನ್ನು ಕರೆದೊಯ್ಯುವ ಮಹತ್ವದ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ವಹಿಸುವ ಪಾತ್ರ ಅತ್ಯಮೂಲ್ಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮತ್ತು ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ಮಕ್ಕಳಲ್ಲಿ ರಾಷ್ಟ್ರಪ್ರೇಮ, ಉತ್ತಮ ಚಿಂತನೆ ಹಾಗೂ ಪ್ರತಿಭೆಯನ್ನು ಬೆಳೆಸುವ ಗುರುಗಳಾಗಿದ್ದಾರೆ. ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ. ಅಂತಹ ಶಿಕ್ಷಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಮಕ್ಕಳ ಭವಿಷ್ಯಕ್ಕೆ ಪ್ರಾಥಮಿಕ ಶಿಕ್ಷಣವೇ ಅಡಿಪಾಯವಾಗಿದ್ದು, ಶಿಕ್ಷಕರ ಜೀವನಶೈಲಿ ಹಾಗೂ ವಿಚಾರಧಾರೆಗಳು ಮಕ್ಕಳ ಮೇಲೆ ಪ್ರಭಾವ ಬೀರುತ್ತವೆ. ಆದ್ದರಿಂದ ಶಿಕ್ಷಕರು ವಸ್ತುನಿಷ್ಠತೆ ಮತ್ತು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ತಮ್ಮ ನಿಸ್ವಾರ್ಥ ಸೇವೆಯನ್ನು ಮುಂದುವರಿಸಬೇಕು ಎಂದು ಕೋಟ ಹೇಳಿದರು.
ಉಡುಪಿ ಜಿಲ್ಲೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಖಾಸಗಿ ದಾನಿಗಳು ಕೂಡ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡುತ್ತಿರುವುದು ವಿಶೇಷವಾಗಿದೆ. ಜಿಲ್ಲೆಯ ಒಳಿತಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಮಕ್ಕಳ ತಪ್ಪು-ಒಪ್ಪುಗಳನ್ನು ತಿದ್ದಿ, ಅವರನ್ನು ಸುಸಂಸ್ಕೃತರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಶಿಕ್ಷಕರಿಗೆ ಗೌರವ ಸಲ್ಲಿಸುವುದು ಹೆಮ್ಮೆಯ ಸಂಗತಿ ಎಂದರು.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಉಡುಪಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಪೋಷಕರು, ವಿದ್ಯಾರ್ಥಿಗಳು, ಆಡಳಿತ ವರ್ಗದ ಜೊತೆಗೆ ಶಿಕ್ಷಕರ ಕೊಡುಗೆಯೂ ಪ್ರಮುಖವಾಗಿದೆ. ಒತ್ತಡದ ನಡುವೆಯೂ ಶಿಕ್ಷಕರು ಮಕ್ಕಳ ಯಶಸ್ಸಿಗೆ ದಾರಿದೀಪವಾಗಿ ನಿಂತಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ನಿರಂತರ ಸುಧಾರಣೆಗೆ ಶಿಕ್ಷಕರ ಕೊಡುಗೆ ಪ್ರಮುಖವಾಗಿದೆ. ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳು, ವೈಜ್ಞಾನಿಕ ಮನೋಭಾವ ಹಾಗೂ ಹೊಸ ಚಿಂತನೆಗಳನ್ನು ಮಕ್ಕಳಲ್ಲಿ ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ನಿವೃತ್ತ ಪ್ರಾಂಶುಪಾಲ ಬಿ. ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಉಪನ್ಯಾಸ ನೀಡಿ, ಶಿಕ್ಷಕರು ಕಾಲಕ್ಕೆ ತಕ್ಕಂತೆ ಬದಲಾಗಬೇಕು ಹಾಗೂ ಹೊಸತನವನ್ನು ರೂಢಿಸಿಕೊಳ್ಳಬೇಕು. ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಅವರ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಕರು ನೆರವಾಗಬೇಕು ಎಂದರು.

ಉತ್ತಮ ಶಿಕ್ಷಕರಿಗೆ ಸನ್ಮಾನ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೈಂದೂರು ಸಾಲಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣೇಶ್, ಬ್ರಹ್ಮಾವರ ಆಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರವಿ, ಕುಂದಾಪುರ ಅಲ್ಬಾಡಿ ಮೂರುಕೈ ಶಾಲೆಯ ಉಷಾಕುಮಾರಿ, ಟಿ.ಟಿ.ರೋಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೀಲಾವತಿ ನಾಯ್ಕ, ಉಡುಪಿ ವಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸುವಾಸಿನಿ ಹಾಗೂ ಕಾರ್ಕಳ ಹೆರ್ಮುಂಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀಕಾಂತ್ ಭಟ್ ಅವರನ್ನು ಗೌರವಿಸಲಾಯಿತು.
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಂಜುಳಾ ಜಯಕರ್, ಶೈಲಜಾ ಶೆಟ್ಟಿ, ಪಾರ್ವತಿ ಎಂ., ವೀಣಾ ಆರ್. ಹಾಗೂ ಸತೀಶ್ಚಂದ್ರ ಅವರಿಗೆ ಸನ್ಮಾನ ನೆರವೇರಿತು.
ಪ್ರೌಢಶಾಲಾ ವಿಭಾಗದಲ್ಲಿ ಕೃಷ್ಣಶೆಟ್ಟಿ, ರವಿರಾಜ್ ಶೆಟ್ಟಿ, ಆರ್. ನಾರಾಯಣ ಶೆಣೈ, ಶಾಂತಪ್ಪ ಮೂಲಂಗಿ ಹಾಗೂ ಪಿಯುಷ್ ಡಿ. ಸೋಜಾ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ವಯೋನಿವೃತ್ತಿ ಹೊಂದಿದ ಶಿಕ್ಷಕರನ್ನೂ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಡಾ. ಅಶೋಕ್ ಕಾಮತ್, ಶಾಲಿನಿ ಜಿ. ಶಂಕರ್, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಸೇರಿದಂತೆ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್ ಸಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಂಜುಳಾ ಜಯಕರ್ ಹಾಗೂ ಸತೀಶ್ ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ. ವಂದಿಸಿದರು.







