ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್ಒಸಿ) ನೀಡಲು ₹5 ಸಾವಿರ ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಕಚೇರಿಯ ಗ್ರಾಮ ಆಡಳಿತಾಧಿಕಾರಿ (ವಿಎ) ಹರೀಶ್ ಎಸ್. ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಕಚೇರಿಯಲ್ಲೇ ಬಂಧಿಸಿದ್ದಾರೆ.
ಈ ಸಂಬಂಧ ಸುರೇಶ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಹೋಂ ಸ್ಟೇಗೆ ಎನ್ಒಸಿ ನೀಡಲು ಆರೋಪಿಯು ₹5 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಹಣವನ್ನು ಗೂಗಲ್ ಪೇ ಮೂಲಕ ಪಾವತಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಅದರಂತೆ ದೂರುದಾರರು ಹಣ ವರ್ಗಾವಣೆ ಮಾಡಿದ್ದರು.
ಹಣ ವರ್ಗಾಯಿಸಲು ಸೂಚಿಸಿದ ಮೊಬೈಲ್ ಕರೆಯ ಧ್ವನಿ ಮುದ್ರಣ (ವಾಯ್ಸ್ ರೆಕಾರ್ಡ್) ಹಾಗೂ ಪಾವತಿಗೆ ಸಂಬಂಧಿಸಿದ ದಾಖಲೆಯನ್ನು ಪರಿಶೀಲಿಸಿ ಮಾಹಿತಿ ಖಚಿತಪಡಿಸಿಕೊಂಡ ಲೋಕಾಯುಕ್ತ ಪೊಲೀಸರು, ಬಳಿಕ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನ ಹಾಗೂ ಉಡುಪಿ ಡಿವೈಎಸ್ಪಿ ಹಾಲಮೂರ್ತಿ ರಾವ್ ಅವರ ನಿರ್ದೇಶನದಲ್ಲಿ ಕಾರ್ಯಾಚರಣೆ ನಡೆಯಿತು. ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಾಜೇಂದ್ರ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಘವೇಂದ್ರ, ನಾಗರಾಜ್, ಅರುಣ್, ಅಬ್ದುಲ್ ಜಲಾಲ್, ರವೀಂದ್ರ, ಆದರ್ಶ, ರಾಘವೇಂದ್ರ ಹೊಸ್ಕೋಟೆ ಹಾಗೂ ಸೂರಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.






